ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಭಾರತದ ಹಲವು ಭಾಗಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಾಗಲಿದೆ. ದೆಹಲಿಯಲ್ಲಿ ಸತತ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿಯ ಹಲವು ಭಾಗಗಳಲ್ಲಿ ನೀರು ನಿಂತಿದ್ದರಿಂದ ಸಂಚಾರ ಸ್ಥಗಿತಗೊಂಡಿದೆ.
ದೆಹಲಿಯಲ್ಲಿ ಫ್ಲಾಟ್ ಸೀಲಿಂಗ್ ಕುಸಿದು 58 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ರಾಜಸ್ಥಾನದಲ್ಲಿ 24 ಗಂಟೆಗಳ ಅವಧಿಯಲ್ಲಿ ಮಳೆಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ರಾಜಸ್ಥಾನದ ರಾಜ್‌ಸಮಂದ್, ಜಲೋರ್, ಪಾಲಿ, ಅಜ್ಮೀರ್, ಅಲ್ವಾರ್, ಬನ್ಸ್‌ವಾರಾ, ಭರತ್‌ಪುರ, ಭಿಲ್ವಾರಾ, ಬುಂದಿ, ಚಿತ್ತೋರ್‌ಗಢ, ದೌಸಾ, ಧೌಲ್‌ಪುರ, ಜೈಪುರ ಮತ್ತು ಕೋಟಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರಾಖಂಡದಲ್ಲಿ ಭೂಕುಸಿತ ಉಂಟಾಗುತ್ತಿದೆ. ಇದರೊಂದಿಗೆ ಸತತ ಮೂರನೇ ದಿನವೂ ಅಮರನಾಥ ಯಾತ್ರೆ ಸ್ಥಗಿತಗೊಂಡಿದೆ.
ಇದೇ ವೇಳೆ ದಕ್ಷಿಣ ರಾಜ್ಯಗಳಾದ ಕೇರಳ ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೇರಳದ ಕೋಝಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ಇದುವರೆಗೆ 19 ಮಂದಿ ಸಾವನ್ನಪ್ಪಿದ್ದು, 10,000 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ. ಹಿಮಾಚಲ ಪ್ರದೇಶದ ಏಳು ಜಿಲ್ಲೆಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.