ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಗಾರು ಚುರುಕುಗೊಂಡಿದ್ದು, ಮಂಗಳವಾರ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಗಾರು ಪ್ರಭಾವದಿಂದ ಜಾರ್ಖಂಡ್ ರಾಜ್ಯದ 24 ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೋಮವಾರ ಆಂಧ್ರಪ್ರದೇಶ ರಾಜ್ಯದ ಕೆಲವು ಜಿಲ್ಲೆಗಳಿಗೆ ಮುಂಗಾರು ವ್ಯಾಪಿಸಿದೆ. ಮಂಗಳವಾರ ಮತ್ತು ಬುಧವಾರ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವೃಣವಿದ್ದು, ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಮಧ್ಯಪ್ರದೇಶ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಯುವ್ಯ ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಿಪರ್ ಜಾಯ್ ಚಂಡಮಾರುತದ ಪರಿಣಾಮದಿಂದಾಗಿ, ರಾಜಸ್ಥಾನ ರಾಜ್ಯದ ಹಲವು ಭಾಗಗಳು ಭಾರೀ ಮಳೆ ಮತ್ತು ಪ್ರವಾಹವನ್ನು ಅನುಭವಿಸಿವೆ.
ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಬಿಹಾರ, ಜಾರ್ಖಂಡ್ ಮತ್ತು ಒಡಿಶಾದಲ್ಲೂ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.
ಮುಂದಿನ ಐದು ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮತ್ತು ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಜೂನ್ 20 ರಂದು ತಮಿಳುನಾಡು ಮತ್ತು ಕರಾವಳಿ ಆಂಧ್ರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.