Wednesday, September 28, 2022

Latest Posts

ಲೈಂಗಿಕ ದೌರ್ಜನ್ಯ ಪ್ರಕರಣ: ವಿದ್ಯಾರ್ಥಿನಿಯರಿಂದ ಮಾಹಿತಿ ದಾಖಲಿಸಿಕೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹೊಸದಿಗಂತ ವರದಿ, ಚಿತ್ರದುರ್ಗ

ಮುರುಘಾಮಠದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದ ಹಾಸ್ಟೆಲ್‌ಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅಲ್ಲಿನ ಎಲ್ಲ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದು ದಾಖಲು ಮಾಡಿಕೊಂಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರ ಸೂಚನೆ ಮೇರೆಗೆ ಹಾಸ್ಟೆಲ್‌ಗೆ ಶನಿವಾರ ಭೇಟಿ ನೀಡಿದ ಅಧಿಕಾರಿಗಳ ತಂಡ ಹಾಜರಾತಿ ಪುಸ್ತಕ, ಊಟ ಹಾಗೂ ವಸತಿ ಸೌಲಭ್ಯ ಸೇರಿದಂತೆ ವಿವಿಧ ವಿಚಾರಗಳ ಕುರಿತು ಪರಿಶೀಲನೆ ನಡೆಸಿದೆ.
ಚಿತ್ರದುರ್ಗ, ದಾವಣಗೆರೆ ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಂದ ಬಂದಿರುವ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಸೇರಿದಂತೆ ಸುಮಾರು ೧೦೦ ವಿದ್ಯಾರ್ಥಿನಿಯರು ಹಾಸ್ಟೆಲ್‌ನಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲ ವಿದ್ಯಾರ್ಥಿನಿಯರ ಹೇಳಿಕೆಯನ್ನು ಪ್ರತ್ಯೇಕವಾಗಿ ದಾಖಲಿಸಲಾಗಿದೆ.
ಲೈಂಗಿಕ ಕಿರುಕುಳದ ಆರೋಪ ಕೇಳಿಬರುತ್ತಿದ್ದಂತೆ ಆತಂಕಗೊಂಡ ಕೆಲವು ಮಕ್ಕಳ ಪಾಲಕರು ಹಾಸ್ಟೆಲ್‌ಗೆ ಬಂದು ತಮ್ಮ ಮಕ್ಕಳನ್ನು ಮನೆಗೆ ಕಳಿಸಿಕೊಡುವಂತೆ ಹಾಸ್ಟೆಲ್ ಸಿಬ್ಬಂದಿಗೆ ದುಂಬಾಲು ಬಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳಿಂದ ಹೇಳಿಕೆ ಪಡೆದ ನಂತರ ನಿಮ್ಮ ನಿಮ್ಮ ಮಕ್ಕಳನ್ನು ಕಳಿಸಿಕೊಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹೇಳಿದ್ದಾರೆಂದು ಮಕ್ಕಳ ಪೋಷಕರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!