ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿರುವ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಆದೇಶಿಸಿದ್ದು , ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಕುಂದಾಪುರದ ಅಮಾಸೆಬೈಲು ನಿವಾಸಿ ಸುರೇಶ್ ಕೊಠಾರಿ ಎಂಬಾತ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ.

ಘಟನೆ ವಿವರ: 
ಶಾಲೆಯೊಂದರ ಬಸ್ ಚಾಲಕನಾಗಿದ್ದ ಈತ ತಾನು ಕೆಲಸ ಮಾಡುತ್ತಿದ್ದ ಶಾಲಾ ಬಸ್ಸಿನಲ್ಲಿ ಆಯಾ ವೃತ್ತಿ ಮಾಡುತ್ತಿದ್ದ 17 ವರ್ಷದ ಯುವತಿಯನ್ನು ಪರಿಚಯಿಸಿಕೊಂಡು ಆಕೆಯ ಮೊಬೈಲ್ ನಂಬರ್ ಪಡೆದುಕೊಂಡಿದ್ದನು.

ಘಟನೆ ನಡೆದ ದಿನ‌ ಶಾಲಾ ಮಕ್ಕಳನ್ನು ಬಿಟ್ಟ ಬಳಿಕ ಆಕೆಯೊಂದಿಗೆ ಮಾತನಾಡಲು ಇದೆಯೆಂದು ಹೇಳಿ ಬೈಕಿನಲ್ಲಿ ಕಾಡು ಪ್ರದೇಶಕ್ಕೆ ಕರೆದೊಯ್ದು ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿದ್ದು, ನಂತರದ ದಿನಗಳಲ್ಲಿಯೂ ಆಕೆಯ ಇಚ್ಚೆಗೆ ವಿರುದ್ಧವಾಗಿ ದೌರ್ಜನ್ಯವೆಸಗಿದ್ದನು.  ಸಂತ್ರಸ್ತ ಬಾಲಕಿ ಗರ್ಭಿಣಿಯಾಗಿ, ತನ್ನ ಮನೆಯ ಬಚ್ಚಲು ಕೋಣೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ತದನಂತರ ಆಕೆ, ಮಗುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು ಬಾಲಕಿ ತಾಯಿ ನೀಡಿದ ದೂರಿನ ಅನ್ವಯ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಂತರ ಆರೋಪಿಯನ್ನು ಬಂಧಿಸಲಾಗಿದ್ದರೂ ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದಿದ್ದ. ಅಂದಿನ ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣೆ ಸಲ್ಲಿಸಿದ್ದರು. ಒಟ್ಟು 30 ಸಾಕ್ಷಿಗಳ ಪೈಕಿ 16 ಸಾಕ್ಷಿಗಳ ವಿಚಾರಣೆ ನಡೆದಿತ್ತು. ನೊಂದ ಬಾಲಕಿ ಸಾಕ್ಷಿ, ಪ್ರಕರಣಕ್ಕೆ ಸಂಬಂಧಿಸಿದ ಪೂರಕ ಸಾಕ್ಷಿಗಳ ಸಹಿತ ಡಿ.ಎನ್.ಎ ವರದಿಯು ಆರೋಪಿ ಸುರೇಶ್ ದೋಷಿ ಎಂಬುದನ್ನು ಸಾಬೀತುಪಡಿಸುವಲ್ಲಿ ಅಭಿಯೋಜನೆಗೆ ಸಹಕಾರಿಯಾಗಿತ್ತು.
ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!