ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಥಾಣೆಯ ಖಾಸಗಿ ಶಾಲೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದು, ಈ ಘಟನೆ ಖಂಡಿಸಿ ಬದ್ಲಾಪುರ ರೈಲು ನಿಲ್ದಾಣದಲ್ಲಿ ಭಾರೀ ಪ್ರತಿಭಟನೆ ನಡೆದಿದೆ.
ಪ್ರತಿಭಟನೆ ಹಿಂಸಾತ್ಮಾಕ ರೂಪಪಡೆದುಕೊಂಡ ಬಳಿಕ ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದ ಪೊಲೀಸರ ಮೇಲೆ ನೆರೆದಿದ್ದ ಜನರು ಕಲ್ಲುತೂರಾಟ ನಡೆಸಿದ್ದಾರೆ.
ಬದ್ಲಾಪುರ ರೈಲು ನಿಲ್ದಾಣದಲ್ಲಿ ಸ್ಥಳೀಯ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಈಗಾಗಲೇ ಘಟನೆ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಪ್ರತಿಕ್ರಿಯಿಸಿದ್ದಾರೆ.
ಈ ಘಟನೆ ಬೆಳಕಿಗೆ ಬಂದ ನಂತರ ಶಾಲಾ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಇನ್ನಿಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಿದೆ ಎಂದು ವರದಿಯಾಗಿದೆ. ಆದರೆ ಈ ಘಟನೆಯ ವಿರುದ್ಧ ಜನರ ಆಕ್ರೋಶ ಭುಗಿಲೆದ್ದಿದ್ದು ನೂರಾರು ಮಂದಿ ಜಮಾಯಿಸಿ ಆರೋಪಿಗಳಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಇಬ್ಬರು ಅಪ್ರಾಪ್ತೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ಹೊರಡಿಸಿದೆ. ಈ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ನಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆರತಿಸಿಂಗ್ ಅವರ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿದೆ. ಶೀಘ್ರದಲ್ಲೆ ಕಠಿಣ ಶಿಕ್ಷೆ ಕೊಡಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಕಾನೂನು ಪ್ರಕ್ರಿಯೆಗಳನ್ನು ತ್ವರಿತಗೊಳಿಸಲು ಯೋಜಿಸಲಾಗಿದೆ. ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಶಾಲೆಯನ್ನು ಸಹ ಹೊಣೆಗಾರರನ್ನಾಗಿ ಮಾಡುತ್ತೇವೆ. ತಪ್ಪಿತಸ್ಥರು ಯಾರನ್ನೂ ಬಿಡುವುದಿಲ್ಲ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.