ಹೊಸದಿಗಂತ ವರದಿ ಕಲಬುರಗಿ:
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ, ನಗರದ ಜಗತ್ ವೃತ್ತದಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್, ಕಲ್ಯಾಣ ಕರ್ನಾಟಕದಲ್ಲಿ ಅಪ್ಪ-ಮಗನಿಗೆ ಮತದಾರರು ತಕ್ಕ ಫಲಿತಾಂಶ ನೀಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ ಬಳಿಕ ಈ ಫಲಿತಾಂಶ ಬಂದಿದೆ. ಈಗಲಾದರೂ ಅಪ್ಪ-ಮಗ ಇದನ್ನು ಅರ್ಥ ಮಾಡಿಕೊಳ್ಳಬೇಕು.ರಾಜ್ಯ ಸರ್ಕಾರ ರೈತರಿಗೆ 2,000 ನೀಡುವುದಾಗಿ ಹೇಳಿತ್ತು. ಆದರೆ, ಇಲ್ಲಿಯವರೆಗೆ ರೈತರ ಖಾತೆಗೆ ಹಣ ಹಾಕಿಲ್ಲ ಎಂದು ಹೇಳಿದರು.
ಈ ಚುನಾವಣೆಯಲ್ಲಿ ಎಲ್ಲ ಜಾತಿಗಳ ಜನರು ಬಿಜೆಪಿಗೆ ಮತ ಹಾಕಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತದಾರರೂ ಬಿಜೆಪಿಯನ್ನು ಬೆಂಬಲಿಸಿದ್ದಾರೆ.ರಾಜ್ಯ ಸರ್ಕಾರದ ಸಚಿವರಿಗೆ ದುರಹಂಕಾರ ಬಂದಿತ್ತು. ಜನರ ಸಮಸ್ಯೆಗಳನ್ನು ಆಲಿಸುವ ಕಿವಿ ಈ ಸರ್ಕಾರಕ್ಕೆ ಇರಲಿಲ್ಲ. ಸುಶಿಕ್ಷಿತ ಮತದಾರರು ಈ ಸರ್ಕಾರಕ್ಕೆ ಕಪಾಳಮೋಕ್ಷ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶವು ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜೆಡಿಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.



