ಹೊಸದಿಗಂತ ವರದಿ, ಕಾರವಾರ:
ರಸ್ತೆ ಮತ್ತು ಸೇತುವೆ ಕಾಮಗಾರಿಗಳನ್ನು ಪೂರೈಸುವ ದೃಷ್ಟಿಯಿಂದ ನವಂಬರ್ 1 ರಿಂದ ಏಳು ತಿಂಗಳುಗಳ ಕಾಲ ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿ ಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಹೊರಡಿಸಿರುವ ಆದೇಶವನ್ನು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹಿಂಪಡೆದಿದ್ದು ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂದಿನಂತೆ ವಾಹನ ಸಂಚಾರ ಮುಂದುವರಿಯಲಿದೆ.
ದೇವಿಮನೆ ಘಟ್ಟ ಪ್ರದೇಶದ ವ್ಯಾಪ್ತಿಯಲ್ಲಿ ರಸ್ತೆ ಮತ್ತು ತಡೆಗೋಡೆ ನಿರ್ಮಾಣ ಮತ್ತು 9 ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ನವಂಬರ್ ನಿಂದ ಮೇ ತಿಂಗಳ ಕೊನೆಯ ವರೆಗೆ ಹೆದ್ದಾರಿಯನ್ನು ಬಂದ್ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಶಿರಸಿ ಸಹಾಯಕ ಆಯುಕ್ತರು ಆದೇಶ ಹೊರಡಿಸಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಿದ್ದರು.
ಸುಮಾರು ಏಳು ತಿಂಗಳುಗಳ ಕಾಲ ರಸ್ತೆ ಬಂದ್ ಆಗುವುದರಿಂದ ಬದಲಿ ಮಾರ್ಗದಲ್ಲಿ ಹೆಚ್ಚುವರಿ ದೂರ ಕ್ರಮಿಸಬೇಕಿರುವ ಕುರಿತು ಸಾರ್ವಜನಿಕ ವಲಯದಿಂದ ವಿರೋಧ ವ್ಯಕ್ತವಾಗಿತ್ತು.
ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಸೂಚನೆಯಂತೆ ಶಿರಸಿ ಕುಮಟಾ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ವಿಧಿಸಿರುವ ನಿರ್ಬಂಧವನ್ನು ಹಿಂಪಡೆಯಲಾಗಿದ್ದು ಸೇತುವೆ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಕೆಲವು ದಿನಗಳ ಕಾಲ ವಾಹನ ಸಂಚಾರ ನಿರ್ಬಂಧ ಮಾಡುವುದಾಗಿ ಜಿಲ್ಲಾಧಿಕಾರಿಗಳು ಹೊಸ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.