May 17, 2026
Sunday, May 17, 2026
spot_img

ಶಿವಂ ಅಸೋಸಿಯೇಟ್ಸ್ ವಂಚನೆ | CIDಯಿಂದ ತನಿಖೆ: ಸಚಿವ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ:

ಬಹುಕೋಟಿ ರೂ. ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್ ಪ್ರಕರಣವನ್ನು ಸರ್ಕಾರ ಅಧಿಕೃತವಾಗಿ ಸಿಐಡಿ ತನಿಖೆಗೆ ವಹಿಸಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಭಾನುವಾರ ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿಗೆ ಒಪ್ಪಿಸಲಾಗಿದೆ. ಸಿಐಡಿ ಅಧಿಕಾರಿಗಳು ತಮ್ಮ ತನಿಖೆಯನ್ನು ಪೂರ್ಣಗೊಳಿಸಿ ವರದಿ ನೀಡಿದ ನಂತರವೇ ಈ ಹಗರಣದ ಸಂಪೂರ್ಣ ಸತ್ಯಾಸತ್ಯತೆ ಮತ್ತು ನಿಖರವಾದ ಮಾಹಿತಿ ಹೊರಬರಲಿದೆ” ಎಂದು ಸ್ಪಷ್ಟಪಡಿಸಿದರು.

ಈ ಪ್ರಕರಣಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ:

ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ, ಇದು ಸಂಪೂರ್ಣವಾಗಿ ಸಾರ್ವಜನಿಕರ ಹಣಕಾಸು ವಂಚನೆಗೆ ಸಂಬಂಧಿಸಿದ ವಿಷಯವಾಗಿದೆ. ಕಾನೂನು ಬಾಹಿರವಾಗಿ ಹಣ ಸಂಗ್ರಹಿಸಿ ಸಾರ್ವಜನಿಕರಿಗೆ ಮೋಸ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಅಥವಾ ಪ್ರೇರೇಪಣೆ ಇಲ್ಲ ಎಂದು ಸಚಿವರು ತಿಳಿಸಿದರು.

ಹಣ ಹೂಡಿಕೆಯಲ್ಲಿ ಜನರು ಎಚ್ಚರಿಕೆ ವಹಿಸಲಿ:

ಹೆಚ್ಚಿನ ಬಡ್ಡಿಯ ಆಮಿಷಕ್ಕೆ ಒಳಗಾಗಿ ಸಾರ್ವಜನಿಕರು ಕಷ್ಟಪಟ್ಟು ದುಡಿದ ಹಣವನ್ನು ಅನಧಿಕೃತ ಸಂಸ್ಥೆಗಳಲ್ಲಿ ಹೂಡಿಕೆ ಮಾಡಬಾರದು. ಹಣ ಹೂಡಿಕೆ ಮಾಡುವಾಗ ಸಾರ್ವಜನಿಕರು ಎಚ್ಚರಿಕೆ ಹೆಜ್ಜೆ ಇಡಬೇಕು ಇದೇ ವೇಲೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಾರ್ವಜನಿಕರಲ್ಲಿ ಮನವಿ ಮಾಡಿದ ಅವರು, “ಯಾವುದೇ ಸಂಸ್ಥೆಗಳು ನಿಯಮಬಾಹಿರವಾಗಿ ಅತಿಯಾದ ಆಸೆ ತೋರಿಸಿದಾಗ ಸಾರ್ವಜನಿಕರು ಜಾಗರೂಕರಾಗಿರಬೇಕು. ಇಂತಹ ವಂಚನೆ ತಡೆಯಲು ಕಾನೂನು ಕ್ರಮದ ಜೊತೆಗೆ ಜನರ ಜಾಗೃತಿಯೂ ಮುಖ್ಯವಾಗಿದೆ ಎಂದು ತಿಳಿಸಿದರು.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಸಂದೀಪ್ ಪಾಟೀಲ್ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಬೆಳಗಾವಿ ಉತ್ತರ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:

ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೇ ನೀಡಿದ ಅವರು; ಚುನಾವಣೆಗಳು ಮುಗಿದ ತಕ್ಷಣವೇ ಕೇಂದ್ರ ಸರ್ಕಾರವು ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವುದು ಹೊಸದೇನಲ್ಲ, ಇದು ಅವರ ಹಳೆಯ ಚಾಳಿಯೇ ಆಗಿದೆ.ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರ ಬದುಕು ದುಸ್ತರವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆಗಳು ನಡೆಯುವ ಸಂದರ್ಭದಲ್ಲಿ ಮತದಾರರನ್ನು ಸೆಳೆಯಲು ಬೆಲೆಗಳನ್ನು ಸ್ಥಿರವಾಗಿಟ್ಟು, ಚುನಾವಣೆ ಮುಗಿಯುತ್ತಿದ್ದಂತೆಯೇ ಏಕಾಏಕಿ ದರ ಹೆಚ್ಚಳ ಮಾಡುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಸಚಿವರು ಟೀಕಿಸಿದರು.

ಇನ್ನು ಕೇಂದ್ರ ಸರ್ಕಾರದ ತೈಲ ಮತ್ತು ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯನ್ನು ಬಿಜೆಪಿಯವರು ಜಾಗತಿಕ ಬಿಕ್ಕಟ್ಟು ಹಾಗೂ ಅಭಿವೃದ್ಧಿಯ ಹೆಸರಿನಲ್ಲಿ ಸಮರ್ಥಿಸಿಕೊಳ್ಳುತ್ತಿರುವುದು ಸಂಪೂರ್ಣ ತಪ್ಪು ಮತ್ತು ಜನವಿರೋಧಿ ನೀತಿ ಎಂದು ಆಕ್ಷೇಪಿಸಿದ ಸಚಿವರು, ಹಿಂದೆ ಯುಪಿಎ ಆಡಳಿತಾವಧಿಯಲ್ಲಿ ಪೆಟ್ರೋಲ್ ದರ ಕೇವಲ 1 ರೂಪಾಯಿ ಹೆಚ್ಚಾದರೂ ದೇಶಾದ್ಯಂತ ಬೀದಿಗಿಳಿದು ದೊಡ್ಡ ಹಂಗಾಮಾ ಮಾಡುತ್ತಿದ್ದ ಇದೇ ಬಿಜೆಪಿ ನಾಯಕರು, ಇಂದು ತಾವೇ ನಿರಂತರವಾಗಿ ಬೆಲೆ ಏರಿಸುತ್ತಿದ್ದರೂ ಮೌನ ವಹಿಸಿರುವುದರ ಹಿಂದೆ ರಾಜಕೀಯ ಸ್ವಾರ್ಥ ಅಡಗಿದೆ. ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ನಾಯಕರು ಜನಸಾಮಾನ್ಯರ ಆರ್ಥಿಕ ಸಂಕಷ್ಟಗಳಿಗೆ ಸಂಪೂರ್ಣವಾಗಿ ಕುರುಡಾಗಿದ್ದಾರೆ. ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದವರ ಬದುಕು ದುಸ್ತರವಾಗಿದ್ದರೂ ಅದನ್ನು ಸಮರ್ಥಿಸಿಕೊಳ್ಳುವುದು ಅವರ ಜನವಿರೋಧಿ ಧೋರಣೆ ತೋರಿಸುತ್ತದೆ ಎಂದು ತಿಳಿಸಿದರು.

ಈ ವೇಳೆ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ವಿನಯ್ ನಾವಲಗಟ್ಟಿ. ಶಾಸಕ ಆಸೀಪ್ ಸೇಠ್, ಹಾಗೂ ಕಾಂಗ್ರೆಸ್ ಮುಖಂಡರು ಸೇರಿದಂತೆ ಇತರರು ಇದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !