ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ ಆಪ್ತ ಸಹಾಯಕ ಸೇರಿದಂತೆ ಹಲವು ಕಾರ್ಯಕರ್ತರು ಇಂದು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಭೋಪಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಕಾಂಗ್ರೆಸ್ ವಕ್ತಾರ ಸೈಯದ್ ಜಾಫರ್ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿ.ಡಿ. ಶರ್ಮಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ.
ಛಿಂದ್ವಾರಾ ಮೂಲದ ಜಾಫರ್ ಅವರನ್ನು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ ಆಪ್ತ ಸಹಾಯಕ ಎಂದೇ ಪರಿಗಣಿಸಲಾಗಿತ್ತು.
ಇತ್ತ ಇತ್ತೀಚೆಗಷ್ಟೇ ಕಮಲನಾಥ್ ಮತ್ತು ಸಂಸದರಾದ ಅವರ ಪುತ್ರ ನಕುಲ್‌ನಾಥ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಆದರೆ, ಈ ಕುರಿತು ಸ್ಪಷ್ಟನೆ ನೀಡಿದ್ದ ಕಮಲನಾಥ್ ಅವರು ಬಿಜೆಪಿಗೆ ಸೇರುತ್ತೇನೆ ಎಂಬ ವದಂತಿಗಳನ್ನು ಸೃಷ್ಟಿಸಿದ್ದು ನೀವೇ (ಮಾಧ್ಯಮಗಳು) ಹೊರತು ನಾನು ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ಕಿಡಿಕಾರಿದ್ದರು.