ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ಬಿಜೆಪಿಯೊಂದಿಗೆ ಕೈಜೋಡಿಸಿದ ಅಂಬರ್‌ನಾಥ್‌ನ 12 ಕಾಂಗ್ರೆಸ್ ಕೌನ್ಸಿಲರ್‌ಗಳನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈ ಮೂಲಕ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ತನ್ನ ಶಿಸ್ತಿನ ಕಹಳೆ ಊದಿದೆ.
ಅಂಬರ್‌ನಾಥ್ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸ್ವಂತ ಚಿಹ್ನೆಯ ಮೇಲೆ ಸ್ಪರ್ಧಿಸಿ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ, ಗೆದ್ದ ನಂತರ ಈ ಕೌನ್ಸಿಲರ್‌ಗಳು ರಾಜ್ಯ ನಾಯಕತ್ವದ ಗಮನಕ್ಕೆ ತರದೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯಾಧ್ಯಕ್ಷ ಹರ್ಷವರ್ಧನ್ ಸಪ್ಕಲ್ ಅವರು ತಕ್ಷಣದ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಗಣೇಶ್ ಪಾಟೀಲ್ ಅವರು ಅಂಬರ್‌ನಾಥ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರದೀಪ್ ಪಾಟೀಲ್ ಅವರಿಗೆ ಪತ್ರ ಬರೆದು ಅಮಾನತಿನ ನಿರ್ಧಾರವನ್ನು ತಿಳಿಸಿದ್ದಾರೆ. “ಬಿಜೆಪಿಯಂತಹ ವಿರೋಧ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವುದು ಪಕ್ಷದ ಘನತೆಗೆ ಚ್ಯುತಿ ತಂದಿದೆ. ಇದು ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ. ಆದ್ದರಿಂದ ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ,” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ವಿಚಿತ್ರ ಮೈತ್ರಿಯ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಅನೈತಿಕ ಮೈತ್ರಿಗಳನ್ನು ನಾವು ಬೆಂಬಲಿಸುವುದಿಲ್ಲ ಎಂದು ಹೇಳಿರುವ ಅವರು, ಈ ಮೈತ್ರಿಯಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

