ಹೊಸದಿಗಂತ ವರದಿ, ಬೆಳಗಾವಿ:
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಭೀಕರ ಕೈಗಾರಿಕಾ ದುರಂತ ಸಂಭವಿಸಿದೆ. ಗ್ರಾಮ ಹೊರವಲಯದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಆರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಧ್ಯಾಹ್ನ ಸುಮಾರು 2 ಗಂಟೆ ಸುಮಾರಿಗೆ ಬಾಯ್ಲರ್‌ನಿಂದ ಬಿಸಿ ಪದಾರ್ಥಗಳು ಸ್ಫೋಟವಾಗಿ ಹೊರಬಿದ್ದು, ಒಟ್ಟು 8 ಜನರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳಲ್ಲಿ ಒಬ್ಬರನ್ನು ಬೈಲಹೊಂಗಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ತುರ್ತುವಾಗಿ ಶಿಫ್ಟ್ ಮಾಡಲಾಗಿದೆ. ಗಾಯಾಳುಗಳನ್ನು ಜಿರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆಯ ಮಾಹಿತಿ ಪಡೆದ ಕೆ. ರಾಮರಾಜನ್ ಅವರು ಬೆಳಗಾವಿಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ಕುರಿತು ಮಾತನಾಡಿದ ಅವರು, ಮರಕುಂಬಿಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಸಂಭವಿಸಿರುವುದು ದುಃಖಕರ. ದೂರು ಆಧರಿಸಿ ಪ್ರಕರಣ ದಾಖಲಿಸಿ, ಸಂಪೂರ್ಣ ತನಿಖೆ ನಡೆಸಲಾಗುತ್ತದೆ” ಎಂದು ಹೇಳಿದರು.
ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಾರ್ಖಾನೆ ಭದ್ರತಾ ಕ್ರಮಗಳು ಮತ್ತು ಬಾಯ್ಲರ್ ನಿರ್ವಹಣೆ ಕುರಿತು ತನಿಖೆ ಮುಂದುವರಿದಿದೆ.
SHOCKING | ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು

