ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಸಿಯಾಟಲ್‌ನ ಹುಕ್ಕಾ ಲಾಂಜ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೌಂಟ್ ಬೇಕರ್ ಸಮೀಪದಲ್ಲಿ ಭಾನುವಾರ ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಆಗ ಹಲವರು 911 ಸಂಖ್ಯೆಗೆ ದೂರವಾಣಿ ಕರೆಗಳನ್ನು ಮಾಡಿದ್ದಾರೆ. ಈ ಕರೆಗಳಿಂದ ಪೊಲೀಸರಿಗೆ ಘಟನೆಯ ವರದಿ ಲಭಿಸಿದ್ದು, ಬಳಿಕ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಭಾನುವಾರ ಬೆಳಗ್ಗೆ ಸುಮಾರು 4.30ಕ್ಕೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳ ಬಗ್ಗೆ ಸಿಟಿ ಪೊಲೀಸರು ಯಾವುದೇ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.
ಗುಂಡಿನ ದಾಳಿಯಲ್ಲಿ ಇಬ್ಬರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡ ಆರು ಜನರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಇತರ ಐವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.