ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದೀರ್ಘಕಾಲದಿಂದ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ನೇಮಕಾತಿ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸರ್ಕಾರವನ್ನು ಎಚ್ಚರಿಸಿದೆ. ಶೀಘ್ರದಲ್ಲೇ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸುವುದಾಗಿ ಎಬಿವಿಪಿ ಎಚ್ಚರಿಕೆ ನೀಡಿದೆ.
ಮಾಧ್ಯಮಗಳಿಗೆ ಪ್ರಕಟಣೆ ನೀಡಿದ ಎಬಿವಿಪಿ, ರಾಜ್ಯದ 430 ಕ್ಕೂ ಹೆಚ್ಚು ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ಒಂದೂವರೆ ತಿಂಗಳಿನಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲವೆಂಬ ಗಂಭೀರ ವಿಷಯವನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದೆ. ಇದರಿಂದ ಪದವಿ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಅತಂತ್ರವಾಗುತ್ತಿರುವುದನ್ನು ಉಲ್ಲೇಖಿಸಿ, ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಅತಿಥಿ ಉಪನ್ಯಾಸಕರ ನೇಮಕಾತಿ ಕುರಿತು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದರೂ, ಇನ್ನೂ ನೇಮಕಾತಿ ಪ್ರಕ್ರಿಯೆ ಜಾರಿಗೆ ಬರದೇ ಇರುವುದು ಸರ್ಕಾರದ ನಿರ್ಲಕ್ಷ್ಯದ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಎಬಿವಿಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇದು ಸರ್ಕಾರದ ಶಿಕ್ಷಣ ಕ್ಷೇತ್ರದತ್ತದ ಇಚ್ಛಾಶಕ್ತಿಯ ಕೊರತೆಯನ್ನು ತೋರಿಸುತ್ತದೆ ಎಂದು ಸಂಘಟನೆ ಕಿಡಿಕಾರಿದೆ.
ಈ ಹಿನ್ನೆಲೆಯಲ್ಲಿ ಎಬಿವಿಪಿ ರಾಜ್ಯಾದ್ಯಂತ ಶಾಂತಿಯುತ ಹೋರಾಟ ಹಾಗೂ ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಸರ್ಕಾರ ವಿದ್ಯಾರ್ಥಿಗಳ ಧ್ವನಿಗೆ ಸ್ಪಂದಿಸದಿದ್ದರೆ ತರಗತಿಗಳನ್ನು ಬಹಿಷ್ಕರಿಸಿ ತೀವ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದೆ.