ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಸರಿಯಾಗಿ ಎದುರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತಾವರ್ ಚಂದ್ ಗೆಹ್ಲೋಟ್ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕು ಎಂದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕು. ಅದೇ ರೀತಿ ಹೋರಾಟಗಾರ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.
ಈ ನಿಟ್ಟಿನಲ್ಲಿ ರಾಜ್ಯಪಾಲರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದರು. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಕೇಂದ್ರ ಸರ್ಕಾರ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದ್ದಾರೆ.