Friday, March 24, 2023

Latest Posts

ಶುಭ್‌ಮನ್‌ ಗಿಲ್‌ ಆಕರ್ಷಕ ಶತಕ: ಟೀಂ ಇಂಡಿಯಾ 289/3 !

ಹೊಸದಿಗಂತ ಡಿಜಿಟಲ್‌ ಡೆಸ್ಕ್ ‌:

ಶುಭ್‌ಮನ್‌ ಗಿಲ್‌ ಆಕರ್ಷಕ ಶತಕ ಹಾಗೂ ಕೊಹ್ಲಿ ಅಜೇಯ ಅರ್ಧಶತಕದ ನೆರವಿನಿಂದ ಮೂರನೇ ದಿನದಾಟದಂತ್ಯದ ವೇಳೆಗೆ ಟೀಂ ಇಂಡಿಯಾ ಕೇವಲ 3 ವಿಕೆಟ್ ಕಳೆದುಕೊಂಡು 289 ರನ್ ಬಾರಿಸಿದ್ದು, ಇನ್ನು ಕೇವಲ 191 ರನ್‌ಗಳ ಹಿನ್ನಡೆಯಲ್ಲಿದೆ.

ವಿರಾಟ್ ಕೊಹ್ಲಿ 59 ಹಾಗೂ ರವೀಂದ್ರ ಜಡೇಜಾ 16 ರನ್‌ ಗಳಿಸಿ ನಾಲ್ಕನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಕೆಟ್‌ ನಷ್ಟವಿಲ್ಲದೇ 36 ರನ್‌ಗಳೊಂದಿಗೆ ಮೂರನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾ, ಭರ್ಜರಿ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಜೋಡಿ 74 ರನ್‌ಗಳ ಜತೆಯಾಟವಾಡಿತು. ನಾಯಕ ರೋಹಿತ್ ಶರ್ಮಾ 35 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ 121 ಎಸೆತಗಳನ್ನು ಎದುರಿಸಿ 3 ಬೌಂಡರಿ ಸಹಿತ 42 ರನ್‌ ಬಾರಿಸಿ ಟೋಡ್ ಮರ್ಫಿ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು. ಎರಡನೇ ವಿಕೆಟ್‌ಗೆ ಚೇತೇಶ್ವರ್ ಪೂಜಾರ ಹಾಗೂ ಶುಭ್‌ಮನ್‌ ಗಿಲ್‌ ಜೋಡಿ 248 ಎಸೆತಗಳನ್ನು ಎದುರಿಸಿ 113 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ದಿನದಾಟದ ಆರಂಭದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಗಿಲ್, 194 ಎಸೆತಗಳನ್ನು ಎದುರಿಸಿ ಟೆಸ್ಟ್‌ ಕ್ರಿಕೆಟ್‌ ವೃತ್ತಿಜೀವನದ ಎರಡನೇ ಶತಕ ಸಿಡಿಸಿ ಸಂಭ್ರಮಿಸಿದರು.ಅಂತಿಮವಾಗಿ ಶುಭ್‌ಮನ್ ಗಿಲ್‌ 235 ಎಸೆತಗಳನ್ನು ಎದುರಿಸಿ 12 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 128 ರನ್‌ ಬಾರಿಸಿ ನೇಥನ್‌ ಲಯನ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.

ಮೊದಲ ಮೂರು ಟೆಸ್ಟ್ ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಲು ವಿಫಲವಾಗಿದ್ದ ವಿರಾಟ್ ಕೊಹ್ಲಿ, ಇದೀಗ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಗಿಲ್ ಜತೆ ಮೂರನೇ ವಿಕೆಟ್‌ಗೆ ವಿರಾಟ್ ಕೊಹ್ಲಿ 100 ಎಸೆತಗಳನ್ನು ಎದುರಿಸಿ 58 ರನ್‌ಗಳ ಜತೆಯಾಟವಾಡಿದರು. ಇನ್ನು ಬರೋಬ್ಬರಿ 14 ತಿಂಗಳ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅರ್ಧಶತಕ ಸಿಡಿಸುವಲ್ಲಿ ಯಶಸ್ವಿಯಾದರು. ಒಟ್ಟು 107 ಎಸೆತಗಳನ್ನು ಎದುರಿಸಿ ವಿರಾಟ್ ಕೊಹ್ಲಿ ಫಿಫ್ಟಿ ಬಾರಿಸುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ವಿರಾಟ್ ಕೊಹ್ಲಿ 128 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 59 ರನ್‌ ಗಳಿಸಿದರೆ, ಜಡೇಜಾ 16 ರನ್‌ ಗಳಿಸಿ ನಾಲ್ಕನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!