ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ಈಗಾಗಲೇ ಮುಖ್ಯಮಂತ್ರಿಯಾಗಿ ಸಿದ್ದರಾಯಮ್ಮ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮತ್ತು ಎಂಟು ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ 16ನೇ ವಿಧಾನಸಭೆಯ ಮೊದಲ ದಿನದ ಅಧಿವೇಶನ ಪ್ರಾರಂಭವಾಗಿದೆ.
ವಿಧಾನಸಭೆ ಕಲಾಪದಲ್ಲಿ ನೂತನ ಶಾಸಕರಿಂದ ಪ್ರಮಾಣವಚನ ಸ್ವೀಕಾರ ಪ್ರಕ್ರಿಯೆ ಆರಂಭವಾಗಿದ್ದು, ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸಿದ್ದರಾಮಯ್ಯ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.