ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲ್ಲ. ಇಲಾಖೆಯೊಂದಿಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಜನರಿಗೆ ರಿಲೀಫ್ ಸಿಕ್ಕಿದೆ.
ಗ್ಯಾರೆಂಟಿ ಯೋಜನೆಗಳಿಗೆ ಹಣ ನೀಡಲು ತೈಲ ಬೆಲೆ ಏರಿಕೆ ಮಾಡಿಲ್ಲ. ಬದಲಿಗೆ, ಆರ್ಥಿಕ ಮೂಲಗಳಾದ ಮದ್ಯ ಮತ್ತು ತೈಲದಿಂದ ಹೆಚ್ಚಿನ ಆದಾಯ ಬಂದರೆ, ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಅಂತ ತೈಲ ಬೆಲೆ ಏರಿಕೆ ಮಾಡಿದ್ದೇವೆ ಎಂದು ಹೇಳಿದರು.
ನಾವು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ ಮೂರು ರೂಪಾಯಿ ಹೆಚ್ಚಿಸಿದ್ದೇವೆ. ಆದರೆ, ಬಿಜೆಪಿ ಸರ್ಕಾರ ಆಡಳಿತ ಇರುವ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ. ನಮ್ಮ ಅಕ್ಕ-ಪಕ್ಕದ ರಾಜ್ಯದಲ್ಲಿ ತೈಲ ಬೆಲೆ ಹೆಚ್ಚಿದೆ, ನಮ್ಮಲ್ಲಿ ಅಲ್ಲಿಗಿಂತ ದರ ಕಡಿಮೆ ಇದೆ. ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಗುಜರಾತ್ ರಾಜ್ಯಗಳಲ್ಲಿ ತೈಲ ಬೆಲೆ ಇಲ್ಲಿಗಿಂತ ಅಧಿಕವಾಗಿದೆ. ಆದರೂ, ಬಿಜೆಪಿ ನಾಯಕರು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಕೇಂದ್ರದ ವಿರುದ್ಧ ಧರಣಿ ಮಾಡಬೇಕು ಎಂದರು.