ಆರೋಗ್ಯಕರ ಟೀಕೆ ಆದ್ರೆ ತಗೋಬೋದು, ಬೇರೆ ಥರದಕ್ಕೆ I dont care ಎಂದ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಖಡಕ್ ಆಗಿ ಹೇಳಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ, ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು ಘೋಷಿಸಿದ್ದಾರೆ. ಆದರೂ ಮಹಾರಾಷ್ಟ್ರ ಚುನಾವಣೆ ವೇಳೆ ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ ಎಂದು ಸುಳ್ಳು ಜಾಹಿರಾತು ನೀಡಿದರು ಎಂದು ವ್ಯಂಗ್ಯವಾಡಿದರು.

ಇವತ್ತು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ ಎಂದರು.

ಮನಸಾಕ್ಷಿಗೆ ತಕ್ಕಂತೆ ಮಾಧ್ಯಮಗಳು ವರದಿ ಮಾಡಿದರೆ ಸಮಾಜಕ್ಕೆ ಅದಕ್ಕಿಂತ ದೊಡ್ಡ ಸೇವೆ ಇಲ್ಲ. ಸುದ್ದಿಗಳನ್ನು ವೈಭವೀಕರಿಸುವುದು, ಮೂಢ ನಂಬಿಕೆಗಳನ್ನು ಬೆಂಬಲಿಸೋಕೆ ಹೋಗಬೇಡಿ. ನನ್ನ ಕಾರು ಮೇಲೆ ಕಾಗೆ ಕುಳಿತಿದ್ದಕ್ಕೆ ಜ್ಯೋತಿಷಿಗಳನ್ನು ಚಾನಲ್ ಗಳಿಗೆ ಕರೆಸಿ ಏನೆಲ್ಲಾ ಹೇಳಿಸಿದಿರಿ. ನಾನು 5 ವರ್ಷ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಲ್ಲ ಎಂದು ತೋರಿಸಿದಿರಿ. ಆದರೆ ನಾನು ಐದು ವರ್ಷ ಪೂರೈಸಿ ಎರಡನೇ ಬಾರಿ ಸಿಎಂ ಆದೆ. ಈಗ ಹೇಳಿ ಕಾಗೆ ಸುದ್ದಿಯಿಂದ ಮಾಧ್ಯಮಗಳ ವಿಶ್ವಾಸಾರ್ಹತೆ ಕಡಿಮೆ ಆಯ್ತೋ ಇಲ್ವೋ ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!