Tuesday, May 30, 2023

Latest Posts

ಕನ್ನಡ ಭಾಷೆಯಲ್ಲೂ CRPF ಪರೀಕ್ಷೆ ಬರೆಯಲು ಅವಕಾಶ ನೀಡಿ: ಪ್ರಧಾನಿಗೆ ಸಿದ್ದರಾಮಯ್ಯ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ನೇಮಕಾತಿ ಪರೀಕ್ಷೆಗಳಲ್ಲಿ ಭಾಷೆಯ ಸಮಸ್ಯೆಯಿಂದಾಗಿ ಜ್ಞಾನ, ಅರ್ಹತೆ ಇರುವ ಕನ್ನಡಿಗರು ಉದ್ಯೋಗವಂಚಿತರಾಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಮಧ್ಯಪ್ರವೇಶಿಸಿ ಈ ಅನ್ಯಾಯವನ್ನು ಸರಿಪಡಿಸಬೇಕು. ಕನ್ನಡ ಭಾಷೆಯಲ್ಲಿಯೂ ಸಿಆರ್‌ಪಿಎಫ್ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

9,212 ಸಿಆರ್‌ಪಿಎಫ್ ಕಾನ್ಸ್‌ಟೇಬಲ್ ನೇಮಕಾತಿಗೆ ಪರೀಕ್ಷೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದ್ದು, ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು (CBT) ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ನಡೆಸಲು ಸೂಚನೆ ನೀಡಲಾಗಿದೆ.

ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣವೇ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ಮೋದಿ ಅವರನ್ನು ಆಗ್ರಹಪಡಿಸುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೇ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ ಎಂದು ದೂರಿದ್ದಾರೆ. ಅಲ್ಲದೆ ‘ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಎಚ್ಚರಿಸಿದ್ದಾರೆ.

ಅಂತೆಯೇ ‘ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!