ಸಿದ್ದರಾಮಯ್ಯ ನಡೆ ಒಳ್ಳೆಯ ಬೆಳವಣಿಗೆಯಲ್ಲ: ವಿಜಯೇಂದ್ರ

ಹೊಸ ದಿಗಂತ ವರದಿ, ದಾವಣಗೆರೆ:

ಹಿಜಾಬ್ ಮೇಲಿನ ನಿಷೇಧ ಹಿಂಪಡೆಯುವುದಾಗಿ ಹೇಳುವ ಮೂಲಕ ಶಾಲಾ ಮಕ್ಕಳಲ್ಲಿ ಜಾತಿಯ ವಿಷ ಬೀಜ ಬಿತ್ತಲು ಮುಂದಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆ ಒಳ್ಳೆಯ ಬೆಳವಣಿಗೆಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಮೇಲಿನ ನಿಷೇಧ ಹಿಂಪಡೆಯುವ ಘೋಷಣೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಉಲ್ಟಾ ಹೊಡೆದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಜಾತಿ ಗಣತಿ ವರದಿ, ಹಿಜಾಬ್ ನಿಷೇಧ ವಾಪಸ್ ಹೀಗೆ ಜಾತಿ-ಜಾತಿಗಳ ಮಧ್ಯೆ ಭಿನ್ನಾಭಿಪ್ರಾಯ ಹುಟ್ಟು ಹಾಕುವ ವಿಷಯಗಳೇ ಸಿದ್ದರಾಮಯ್ಯಗೆ ನೆನಪಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಸಿದ್ದರಾಮಯ್ಯ ಸರ್ಕಾರದ ವಿರೋಧಿ ಅಲೆಯೂ ಶುರುವಾಗಿದೆ. ರಾಜ್ಯದಲ್ಲಿ ಬರ ಸೇರಿದಂತೆ ಅನೇಕ ಜ್ವಲಂತ ಸಮಸ್ಯೆಗಳು ಇವೆ. ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲಿಗೆ ಹಿಜಾಬ್ ನಿಷೇಧದ ಆದೇಶ ಹಿಂಪಡೆಯುವ ಮಾತುಗಳನ್ನಾಡಿ ವಿವಾದ ಶುರು ಮಾಡಿದ್ದಾರೆ. ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಜಾಬ್ ವಿಚಾರದಲ್ಲಿ ಯಾಕೆ ಇಷ್ಟೊಂದು ಅವಸರ? ಎಂದು ಅವರು ಪ್ರಶ್ನಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ನೂತನ ರಾಜ್ಯ ಪದಾಧಿಕಾರಿಗಳ ಸಭೆ ಡಿ.26ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯಲಿದ್ದು, ಪಕ್ಷ ಸಂಘಟನೆ ಸೇರಿದಂತೆ ಅನೇಕ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈಗಳನ್ನು ಮತ್ತಷ್ಟು ಬಲಪಡಿಸುವುದು ನಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!