ಹೊಸದಿಗಂತ ಡಿಜಿಟಲ್ ಡೆಸ್ಕ್:
“ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಸೇರಿದಂತೆ ಯಾರಿಗೂ ಅಧಿಕಾರ ಎಂಬುದು ಶಾಶ್ವತವಲ್ಲ” ಎಂದು ಹೇಳುವ ಮೂಲಕ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪಕ್ಷ ನೀಡುವ ನಿರ್ದೇಶನಗಳನ್ನು ಪಾಲಿಸುವುದು ಪ್ರತಿಯೊಬ್ಬ ಕಾರ್ಯಕರ್ತನ ಆದ್ಯ ಕರ್ತವ್ಯ. ಅದು ಮುಖ್ಯಮಂತ್ರಿಯಾಗಿರಲಿ, ಮಂತ್ರಿಯಾಗಿರಲಿ ಅಥವಾ ಸಾಮಾನ್ಯ ಕಾರ್ಯಕರ್ತನಾಗಿರಲಿ, ಪಕ್ಷದ ಆದೇಶಕ್ಕೆ ಎಲ್ಲರೂ ತಲೆಬಾಗಲೇಬೇಕು,” ಎಂದು ಮಾರ್ಮಿಕವಾಗಿ ನುಡಿದರು.
ಇತ್ತೀಚೆಗಷ್ಟೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ, “ನಾನು ಕೇವಲ ಭಾಷಣ ಮಾಡಿ ಹೋಗುವ ನಾಯಕನಲ್ಲ, ಪಕ್ಷಕ್ಕಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ” ಎಂದು ಭಾವುಕರಾಗಿ ನುಡಿದಿದ್ದರು. ಸಿದ್ದರಾಮಯ್ಯ ಬೆಂಬಲಿಗರ ಹೇಳಿಕೆಗಳಿಂದ ಅಸಮಾಧಾನಗೊಂಡಿದ್ದ ಡಿಕೆಶಿ ಅವರ ಈ ಹೇಳಿಕೆಗೆ, ಈಗ ಯತೀಂದ್ರ ಅವರು ‘ಅಧಿಕಾರ ಶಾಶ್ವತವಲ್ಲ’ ಎಂಬ ಮಾತಿನ ಮೂಲಕ ತಿರುಗೇಟು ನೀಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

