ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಲವು ಹಾನಿ ಸಂಭವಿಸಿದೆ. ಬೆಂಗಳೂರಿನ ಹಲವು ಪ್ರದೇಶಗಳು ಜಲಾವೃತವಾಗಿದ್ದು ಪ್ರವಾಹದಂತಹ ಪರಿಸ್ಥಿತಿ ಎದುರಾಗಿದೆ. ಬೆಳ್ಳಂದೂರು, ಸರ್ಜಾಪುರ ರಸ್ತೆ, ವೈಟ್‌ಫೀಲ್ಡ್, ಹೊರ ವರ್ತುಲ ರಸ್ತೆ ಮತ್ತು ಬಿಇಎಂಎಲ್ ಲೇಔಟ್ ಮುಂತಾದ ಪ್ರದೇಶಗಳಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ.
ಕೆಲವು ಗಂಟೆಗಳ ಕಾಲ ಸುರಿದ ನಿರಂತರ ಮಳೆಯಿಂದ ಹಲವೆಡೆ ನೀರು ತುಂಬಿಕೊಂಡಿದ್ದು ನೆಟ್ಟಿಗರು ಹಲವು ಪ್ರದೇಶಗಳ ಫೋಟೋವನ್ನು ಹಂಚಿಕೊಂಡಿದ್ದಾರೆ. ಮಾರತ್ತಹಳ್ಳಿಯ ಸ್ಪೈಸ್ ಗಾರ್ಡನ್ ಪ್ರದೇಶದಲ್ಲಿ ದ್ವಿಚಕ್ರ ವಾಹನಗಳು ನೀರಿನಲ್ಲಿ ತೇಲುತ್ತಿವೆ. ತೀವ್ರ ಜಲಾವೃತದಿಂದಾಗಿ ಸ್ಪೈಸ್ ಗಾರ್ಡನ್‌ನಿಂದ ವೈಟ್‌ಫೀಲ್ಡ್‌ವರೆಗಿನ ರಸ್ತೆ ಸಂಚಾರ ಸ್ಥಗಿತಗೊಂಡಿದೆ.ಬೆಂಗಳೂರಿನ ಹೊರವಲಯದಲ್ಲಿರುವ ಟೆಕ್ ಪಾರ್ಕ್‌ಗಳಿಗೆ ನಗರವನ್ನು ಸಂಪರ್ಕಿಸುವ ಹೊರ ವರ್ತುಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಏತನ್ಮಧ್ಯೆ, ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದಲ್ಲಿ ಸೆಪ್ಟೆಂಬರ್ 9 ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳು ಮತ್ತು ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 5 ರಿಂದ 9 ರವರೆಗೆ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.
ವೇಗದ ಗಾಳಿ ಬೀಸುವ ಮುನ್ಸೂಚನೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಉತ್ತರ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ ಮತ್ತು ದಾವಣಗೆರೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ.