ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ವರದಿ, ಚಿತ್ರದುರ್ಗ:
ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಮತ್ತು ತಮ್ಮ-ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಳ ಗಣೇಶೋತ್ಸವ ಆಚರಿಸುವ ಕುರಿತು ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಎತ್ತರ ಮೀರದಂತೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವುದು ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು ಎಂದರು.
ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿ.ಜೆ. ಮೂಲಕ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಮೆರವಣಿಗೆ ಮಾಡುವಂತಿಲ್ಲ.
ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ ೧೮೮ರ ಅಡಿಯಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ಜಿಲ್ಲೆಯಲ್ಲಿ ಸರಳ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಸಮಿತಿ ಆಯೋಜಕರನ್ನು ಕರೆದು ಶಾಂತಿಸಭೆಗಳನ್ನು ನಡೆಸಲಾಗುತ್ತಿದೆ. ಗಣೇಶೋತ್ಸವ ಆಚರಣೆಯ ಹೊಸ ಮಾರ್ಗಸೂಚಿಯನ್ವಯ ಬಂದೋಬಸ್ತ್ ಕೈಗೊಳ್ಳಲಾಗುವುದು. ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದು ಪೊಲೀಸ್ ಇಲಾಖೆಯಿಂದ ಎನ್ಒಸಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಮಾತನಾಡಿ, ಗಣೇಶ ಆಚರಣೆಯ ಆಯೋಜಿತ ಸ್ಥಳಗಳಲ್ಲಿ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಹಾಗೂ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದ್ದು, ಇದರ ಅಂಗವಾಗಿ ಐದು ದಿನಗಳ ಕಾಲ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.