ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಗಾಯನ ಕಡ್ಡಾಯ: ಸರ್ಕಾರ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ನೋಂದಾಯಿತ ಖಾಸಗಿ, ಅನುದಾನಿತ, ಅನುದಾನರಹಿತ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಸಂಬಂಧ ಅಧಿಕೃತ ಪ್ರಕಟಣೆ ಮೂಲಕ ಆದೇಶ ಹೊರಡಿಸಿದೆ. ಯಾವುದೇ ಕಾರಣಕ್ಕೂ ರಾಷ್ಟ್ರಗೀತೆಗೆ ಅಪಚಾರ ಆಗದಂತೆ ನೋಡಿಕೊಳ್ಳುವಂತೆಯೂ ಸೂಚಿಸಲಾಗಿದೆ.

ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆಯನ್ನು ಹಾಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನ ಹಾಗೂ ರಾಷ್ಟ್ರದ ಬಗ್ಗೆ ಗೌರವದ ಭಾವನೆಗಳನ್ನು ಮೂಡಿಸಬೇಕು. ಮುಂಜಾನೆಯ ಸಾಮೂಹಿಕ ಪ್ರಾರ್ಥನೆಯ ಸಂದರ್ಭ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆಯನ್ನು ಸಾಮೂಹಿಕವಾಗಿ ಹಾಡಿಸುವ ಸಂಪ್ರದಾಯ ರಾಜ್ಯದ ಎಲ್ಲಾ ಶಾಲೆಗಳಲ್ಲಿ ರೂಢಿಯಲ್ಲಿದೆ. ಆದರೆ, ಬೆಂಗಳೂರಿನ ಕೆಲವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಪ್ರತಿದಿನ ಹಾಡಿಸುತ್ತಿಲ್ಲ ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮೂಲಕ ಈ ಆದೇಶ ಹೊರಡಿಸಿದೆ.

ನಾಗರಿಕ ಪ್ರಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸುವುದು, ಸಂವಿಧಾನವನ್ನು ಅನುಸರಿಸುವುದು ಹಾಗೂ ಸಂವಿಧಾನದ ಆದರ್ಶಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು, ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಯನ್ನು ಗೌರವಿಸುವುದಕ್ಕೆ ಸಂಬಂಧಿಸಿದಂತಹ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅಧಿಕಾರವಿರುತ್ತದೆ. ಒಂದೊಮ್ಮೆ ಆದೇಶ ಸಮರ್ಪಕವಾಗಿ ಪಾಲನೆ ಆಗದಿದ್ದರೆ ಕ್ರಮ ಕೈಗೊಳ್ಳುವ ಅಧಿಕಾರವು ರಾಜ್ಯ ಸರ್ಕಾರಕ್ಕೆ ಇರಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.


ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!