ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ದೂರುದಾರನ ಆರೋಪಕ್ಕೆ ಸಂಬಂಧಿಸಿ ಎಸ್ಐಟಿ ಯಾವುದೇ ಒತ್ತಡಕ್ಕೆ ಮಣಿಯದೆ ಪಾರದರ್ಶಕವಾಗಿ ಮತ್ತು ನಿಷ್ಪಕ್ಷಪಾತವಾಗಿ ಸತ್ಯಾಂಶವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆಯ ಕುರಿತಂತೆ ಸೋಮವಾರ ಗೃಹ ಸಚಿವರು ಸದನದಲ್ಲಿ ಉತ್ತರ ನೀಡಲಿದ್ದಾರೆ. ಆ ಸಂದರ್ಭ ಎಲ್ಲಾ ವಿಚಾರ ಹೊರಬರಲಿದೆ. ಧರ್ಮಸ್ಥಳ ವಿಚಾರದಲ್ಲಿ ಮುಚ್ಚಿ ಹಾಕುವಂತದ್ದು ಏನೂ ಇಲ್ಲ. ನಟ ದರ್ಶನ್ ಅಥವಾ ಪ್ರಜ್ವಲ್ ರೇವಣ್ಣ ಪ್ರಕರಣಗಳೇ ಇರಲಿ, ನಿಜಾಂಶ ಹೊರಬೇಕು. ತಪ್ಪಾಗಿದ್ದರೆ ಶಿಕ್ಷೆಯಾಗಬೇಕು. ಅಮಾಯಕರಿಗೆ ತೊಂದರೆ ಆಗಬಾರದು. ಆಪಾದನೆಗೆ ತಕ್ಕುದಾಗಿ ತನಿಖೆ ನಡೆಯುತ್ತಿದೆ ಎಂದು ಹೇಳಿದರು.