ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಕಲುಷಿತ ನೀರು ಸೇವಿಸಿ ಅಂಬೆಗಾಲಿಡುವ ಮಗು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.
ನೂರಾರು ನಿವಾಸಿಗಳು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಚಿಕ್ಕದಾಸಪ್ಪ (76) ಮತ್ತು ಪೆದ್ದಣ್ಣ (74) ಎಂಬ ಇಬ್ಬರು ವಯೋವೃದ್ಧರು ಇಲ್ಲಿನ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಐಸಿಯುಗಳಲ್ಲಿ ಮೂವರು ವೃದ್ಧರು, ಮೂವರು ಮಕ್ಕಳು ಸೇರಿದಂತೆ ಹತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಆಸ್ಪತ್ರೆಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಲುಷಿತ ನೀರಿನ ಮೂಲದ ಬಗ್ಗೆ ಹಾಗೂ ಶುದ್ಧ ನೀರನ್ನು ಸರಬರಾಜು ಮಾಡುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.