ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರುಣಾಚಲ ಪ್ರದೇಶ(Aruchal Pradesh) ಮತ್ತು ಸಿಕ್ಕಿಂ(Sikkim) ವಿಧಾನಸಭೆ ಚುನಾವಣೆ(Assembly Election Results 2024) ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯುತ್ತಿದ್ದು, ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಪಕ್ಷ ಧೂಳೆಬ್ಬಿಸುವ ಲಕ್ಷಣ ದಟ್ಟವಾಗಿದ್ದು, ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಭರ್ಜರಿಯಾಗಿ ಗೆಲುವಿಗೆ ಸಜ್ಜಾಗಿದೆ.
ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಈಗ ಹೊಸ ಇತಿಹಾಸ ನಿರ್ಮಿಸುತ್ತಿದ್ದು, ಬರೋಬ್ಬರಿ 36 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಸಿಕ್ಕಿಂನಲ್ಲಿ ಅಧಿಕಾರದಲ್ಲಿರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ, 32 ಸ್ಥಾನಗಳ ಪೈಕಿ 31 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಪ್ರತಿಪಕ್ಷ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಸಿಕ್ಕಿಂನ 32 ಸ್ಥಾನಗಳಲ್ಲಿ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆಗಳು ಆರಂಭವಾಗಿವೆ. ಇಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಖಾತೆ ತೆರಯುವಲ್ಲಿ ವಿಫಲವಾಗಿದೆ. ಇನ್ನು ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಕ್ಲೀನ್ ಸ್ವೀಪ್ ಮಾಡೋದ್ರಲ್ಲಿ ಡೌಟೇ ಇಲ್ಲ.
ಅರುಣಾಚಲ ಪ್ರದೇಶದಲ್ಲಿ 60 ಕ್ಷೇತ್ರದಲ್ಲಿ 50 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ. ಈಗಾಗಲೇ 10 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದು, 33 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಮಿತ್ರ ಪಕ್ಷ ಕಾನ್ರಾಡ್ ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ ಎಂಟು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಮತ್ತೆ ಪೆಮಾ ಖಂಡು ಮುಖ್ಯಮಂತ್ರಿಯಾಗಿ ಗದ್ದುಗೆ ಏರುವುದು ಖಚಿತವಾಗಿದೆ.