ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ರುವಾರಿ ಉಗ್ರ ಶಾರೀಕ್ಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯದಲ್ಲಿ ತುಸು ಚೇತರಿಕೆ ಕಾಣಿಸಿದೆ.
ಶಾರೀಕ್ ಚಿಕಿತ್ಸೆಯಲ್ಲಿರುವ ಆಸ್ಪತ್ರೆಯ ಸುತ್ತ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದ್ದು, ದಿನದ ೨೪ ತಾಸುಗಳ ಕಾಲ ವೈದ್ಯರುಗಳೂ ಆತನ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ.
ಸ್ಪೋಟ ಪ್ರಕರಣದ ಆರೋಪಿ ಶಾರೀಕ್ ಆರೋಗ್ಯ ಸ್ಥಿತಿಯನ್ನು ಗಮನಿಸಲಾಗುತ್ತಿದೆ. ಆತನಿಗೆ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಯಲ್ಲಿ ಹೆಚ್ಚಿನ ಭದ್ರತೆ ಮಾಡಲಾಗಿದ್ದು, ಶಾರೀಕ್ನನ್ನು ಯಾರಿಗೂ ಭೇಟಿ ಮಾಡಲು ಅವಕಾಶ ನೀಡಲಾಗುತ್ತಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಆರೋಪಿ ಹೇಳಿಕೆ ಕೊಟ್ಟಿದ್ದಾನೆ, ಅವನಲ್ಲಿ ಟಾರ್ಗೆಟ್ಸ್ ಸಿಕ್ಕಿದೆ, ಕೆಲವರ ಹೆಸರು ಹೇಳಿದ್ದಾನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದ್ದು, ಇದು ಸುಳ್ಳು ಎಂದು ಅವರು ಸ್ಪಷ್ಟಪಡಿಸಿದ್ದಾರೆ.