August 3, 2026
Monday, August 3, 2026
spot_img

ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್‌ ಅವರ ಭಾಷಣಕ್ಕೆ ಅಡ್ಡಿಪಡಿಸಿ, ಚಪ್ಪಲಿ ಎಸೆದು ಗದ್ದಲ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

150ಕ್ಕೂ ಹೆಚ್ಚು ಜನರ ವಿರುದ್ಧ ತನಿಖೆ ತೀವ್ರ

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕುಶಾಲ್ ಚೌಕ್ಸಿ ಅವರು, “ಘಟನೆಯಲ್ಲಿ ಸುಮಾರು 100 ರಿಂದ 150 ಕ್ಕೂ ಹೆಚ್ಚು ಮಂದಿ ಭಾಗಿಯಾಗಿರುವ ಶಂಕೆಯಿದೆ. ಲಭ್ಯವಿರುವ ವಿಡಿಯೋ ಸಾಕ್ಷ್ಯಗಳನ್ನು ಆಧರಿಸಿ ಇನ್ನುಳಿದ ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಕಾರ್ಯಕ್ರಮದಲ್ಲಿ ಒಕ್ಕಲಿಗ ಸೇರಿದಂತೆ ಹಲವು ಸಮುದಾಯದವರಿದ್ದರು. ಗಲಾಟೆ ಮಾಡಿದವರು ರಾಜಕೀಯ ಪಕ್ಷದವರೇ ಅಥವಾ ಸಾರ್ವಜನಿಕರೇ ಎಂಬ ತನಿಖೆ ನಡೆಯುತ್ತಿದೆ. ಘಟನೆಯ ಸೂತ್ರಧಾರಿಗಳು ಯಾರೇ ಆಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.

ಪೊಲೀಸ್ ವೈಫಲ್ಯದ ಆರೋಪ ತಳ್ಳಿಹಾಕಿದ ಎಸ್‌ಪಿ

ಇದೇ ವೇಳೆ ಇಲಾಖೆಯ ಮೇಲಿನ ವೈಫಲ್ಯದ ಆರೋಪಗಳನ್ನು ನಿರಾಕರಿಸಿದ ಎಸ್‌ಪಿ, ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು ಎಂದಿದ್ದಾರೆ. ಇದೊಂದು ಉದ್ದೇಶಪೂರ್ವಕವಾಗಿ ಶಾಸಕರಿಗೆ ಅವಮಾನ ಮಾಡುವ ಯತ್ನವಾಗಿದ್ದು, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !