ಹೊಸದಿಗಂತ ವರದಿ ತುಮಕೂರು:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಉಚ್ಛ ನ್ಯಾಯಾಲಯದಿಂದ ರಾಜ್ಯಪಾಲರ ಪ್ರಾಸಿಕ್ಯೂಷನ್ ಸಿಂಧುಗೊಳಿಸಿದ ತೀರ್ಪು ಹೊರ ಬಂದ ನಂತರ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಲಾಗಿದೆ ಎಂದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ, ತನಿಖೆ ಎದುರಿಸಲಿ. ಒಂದು ವೇಳೆ ತನಿಖೆಯಲ್ಲಿ ಕ್ಲೀನ್‍ಚಿಟ್ ಬಂದರೆ ಮತ್ತೆ ಮುಖ್ಯಮಂತ್ರಿಯಾಗಲಿ. ಇದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬದುಕಿನುದ್ದಕ್ಕೂ ನೈತಿಕತೆಯ ಮಾತುಗಳನ್ನಾಡುತ್ತಾ ಬಂದಿದ್ದಾರೆ. ನೈತಿಕತೆಯ ವಿಚಾರದಲ್ಲಿ ಅವರು ಯಾವತ್ತೂ ಕೂಡ ಹಿಂದಿರುಗಿ ನೋಡಿಲ್ಲ ಎಂದು ಭಾವಿಸಿದ್ದೇವೆ. ಹಾಗಾಗಿ ಈ ಪ್ರಕರಣದ ಸಂಬಂಧ ನೈತಿಕತೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
ಬಿಜೆಪಿಯವರು ಷಡ್ಯಂತ್ರ ಮಾಡಿದ್ದಾರೆ, ನಾನೇನು ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯದಲ್ಲಿ ಭಂಡತನಕ್ಕೆ ನಾವು ಉತ್ತರ ಕೊಡಲು ಸಾಧ್ಯವಿಲ್ಲ. ಇದೆಲ್ಲಾ ರಾಜಕೀಯದಲ್ಲಿ ಸರ್ವೇ ಸಾಮಾನ್ಯದ ಮಾತು. ಇದೇನೆ ಇರಲಿ, ಹೈಕೋರ್ಟ್ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದು ಪ್ರಾಸಿಕ್ಯೂಷನ್ ತನಿಖೆಗೆ ಸಮ್ಮತಿಸಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಅವರು ಆಗ್ರಹಿಸಿದರು.