Wednesday, August 10, 2022

Latest Posts

ಶೀಘ್ರದಲ್ಲೇ 700 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಾಣ: ಸಚಿವ ಭೈರತಿ ಬಸವರಾಜ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಮೈಸೂರು:

ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಕಮರಹಳ್ಳಿ ಭಾಗದಲ್ಲಿ ರೈತರ ಸಹಕಾರ ಪಡೆದು 50:50ರ ಅನುಪಾತದ 700ಎಕರೆ ಪ್ರದೇಶದಲ್ಲಿಅತ್ಯಾಧುನಿಕ ಬಡಾವಣೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ತಿಳಿಸಿದರು.
ಶನಿವಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು, ಈಗಾಗಲೇ 374ಎಕರೆಯ ಭೂಮಿಯನ್ನು ಪಡೆದುಕೊಂಡಿದ್ದು, ಉಳಿದಿದ್ದನ್ನು ಶೀಘ್ರವಾಗಿ ಪಡೆದುಕೊಳ್ಳಲು ಕ್ರಮವಹಿಸಲಾಗಿದೆ. 15 ದಿನದಲ್ಲಿ ಮತ್ತೆ ಮೈಸೂರಿಗೆ ಭೇಟಿ ನೀಡಿ ಪ್ರತಿಯೊಬ್ಬರ ಸಲಹೆಯನ್ನು ಆಲಿಸಿದ ನಂತರ ತೀರ್ಮಾನವನ್ನು ಕೈಗೊಳ್ಳಲಿದ್ದೇವೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ರೈತರ ಸಹಕಾರದೊಂದಿಗೆ50:50ರ ಅನುಪಾತದಲ್ಲಿ ಬಡಾವಣೆ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.
ಕಬಿನಿಯಿಂದ ಪ್ರಸ್ತುತ 60ಎಂ.ಎಲ್.ಡಿ ನೀರನ್ನು ಮಾತ್ರ ಪಡೆದುಕೊಳ್ಳಲಾಗುತ್ತಿದೆ. ಇನ್ನೂ 90 ಎಂ.ಎಲ್.ಡಿ. ನೀರು ಪಡೆದುಕೊಳ್ಳಲು ಅವಕಾಶವಿದೆ. ಈ ನಿಟ್ಟಿನಲ್ಲಿ 95 ಕೋಟಿರೂ. ವೆಚ್ಚದ ಯೋಜನೆ ಜಾರಿಗೆ ಇಂದಿನ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಕೊಳ್ಳಲಾಗಿದೆ ಎಂದು ತಿಳಿಸಿದರು.
ಹೊಸದಾಗಿ ನಿರ್ಮಾಣವಾಗುವ ಬಡಾವಣೆಯಲ್ಲಿ ಪತ್ರಕರ್ತರಿಗೂ ನಿವೇಶನಗಳನ್ನು ಮೀಸಲು ಇರಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್,ಶಾಸಕರಾದ ಎಲ್.ನಾಗೇಂದ್ರ, ಜಿ.ಟಿ.ದೇವೇಗೌಡ, ತನ್ವೀರ್‌ಸೇಠ್, ಮರಿತಿಬ್ಬೇಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮುಡಾ ಆಯುಕ್ತ ಡಾ.ನಟೇಶ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss