ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಹಾಸನದ ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರಿಗೆ ಅಯೋಧ್ಯೆಯ ರಾಮಮಂದಿರ ಪ್ರಾಧಿಕಾರ ಆಹ್ವಾನ ನೀಡಿದೆ.
ಈ ಸಂಬಂಧ ರಾಮಲಲ್ಲಾ ದೇಗುಲದ ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂಪಾಲ್ ರೈ ಅವರು, ಕೋಡಿಮಠ ಶ್ರೀಗೆ ಪತ್ರ ಬರೆದಿದ್ದಾರೆ. ರಾತ್ರಿ ಉಳಿದುಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ಒಂದು ದಿನ ಮುಂಚಿತವಾಗಿ ಅಯೋಧ್ಯಾ ಪಟ್ಟಣಕ್ಕೆ ಆಗಮಿಸುವಂತೆ ಮನವಿ ಮಾಡಿದ್ದಾರೆ.
ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಶ್ರೀಗಳು ನಿರ್ಧರಿಸಿದ್ದಾರೆ ಮತ್ತು 48 ದಿನಗಳ ಕಾಲ ನಡೆಯಲಿರುವ ವಿವಿಧ ಪೂಜೆ ಮತ್ತು ವಿಧಿವಿಧಾನಗಳಲ್ಲಿ ಭಾಗವಹಿಸಲು ಒಂದೆರಡು ದಿನ ಅಯೋಧ್ಯೆಯಲ್ಲಿ ಉಳಿದುಕೊಳ್ಳಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.