ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಆರ್ಭಟ ಮುಂದುವರೆದಿದ್ದು, ಶೃಂಗೇರಿ, ಕಳಸ, ಮೂಡಿಗೆರೆ, ಕೊಪ್ಪ ಹಾಗೂ ಎನ್‌ಆರ್ ಪುರ ಭಾಗಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಶೃಂಗೇರಿಯಲ್ಲಿ ನದಿಯ ನೀರಿನ ಮಟ್ಟ ಹೆಚ್ಚಾಗಿ ನೆರೆ ಆತಂಕ ಹೆಚ್ಚಾಗಿದ್ದು, ಕೆಲ ಪ್ರದೇಶಗಳು ಈಗಾಗಲೇ ಜಲಾವೃತಗೊಂಡಿವೆ. ತುಂಗಾ ನದಿಯ ನೀರು ಗಾಂಧಿ ಮೈದಾನದ ಪಾರ್ಕಿಂಗ್ ಪ್ರದೇಶಕ್ಕೆ ನುಗ್ಗಿದ್ದು, ಪ್ರವಾಸಿಗರ ಕಾರುಗಳು ಮುಳುಗಡೆಗೊಂಡಿವೆ.
ಶೃಂಗೇರಿ–ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭೂಕುಸಿತ ಸಂಭವಿಸಿದೆ. ಗುಡ್ಡ ಕುಸಿದ ಪರಿಣಾಮ ರಸ್ತೆಗೆ ಮಣ್ಣು ಬಂದಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಶೃಂಗೇರಿ ಶಾರದಾ ಮಠದ ಸುತ್ತಲೂ ನೀರಿನ ಮಟ್ಟ ಹೆಚ್ಚಾಗುತ್ತಿರುವ ಹಿನ್ನೆಲೆ, ಮಠದ ಸಂಪರ್ಕ ರಸ್ತೆಯನ್ನೂ ಬಂದ್ ಮಾಡಲಾಗಿದೆ.
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬಿರುಗಾಳಿ ಹಾಗೂ ಮಳೆಯಿಂದಾಗಿ ಬೃಹತ್ ಮರ ಧರೆಗುರುಳಿದ್ದು, ಝರಿ ಫಾಲ್ಸ್, ಮುಳ್ಳಯ್ಯನ ಗಿರಿ ಹಾಗೂ ದತ್ತಾತ್ರೇಯ ಬಾಬಾ ದರ್ಗಾ ಮಾರ್ಗದಲ್ಲಿ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಹಾನಿಯಾಗಿವೆ. ತಕ್ಷಣ ಸ್ಪಂದಿಸಿದ ಸ್ಥಳೀಯರು ಹಾಗೂ ಅಧಿಕಾರಿಗಳು ರಸ್ತೆ ತೆರವು ಕಾರ್ಯಕ್ಕೆ ಕೈ ಹಾಕಿದ್ದಾರೆ.
ಚಿಕ್ಕಮಗಳೂರಿನಲ್ಲಿ ಶನಿವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಾದ ಪರಿಣಾಮ ಮನೆಗಳಿಗೂ ಹಾನಿಯಾಗಿದೆ. ಶುಕ್ರವಾರದಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮೂರು ದಿನಗಳ ಕಾಲ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.