ಗುಟ್ಕಾ ಜಾಹೀರಾತು ಪ್ರಕರಣ : ನಟ ಅಕ್ಷಯ್ ಕುಮಾರ್, ಶಾರುಖ್, ಅಜಯ್ ದೇವಗನ್‌ಗೆ‌ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗುಟ್ಕಾ ಕಂಪನಿಯ ಜಾಹಿರಾತುಗಳಲ್ಲಿ ಕಾಣಿಸಿಕೊಂಡ ಹಿನ್ನೆಲೆ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರವು ಅಲಹಾಬಾದ್ ನ್ಯಾಯಾಲಯದ ಲಖನೌ ಪೀಠಕ್ಕೆ ತಿಳಿಸಿದೆ.

ಸುಪ್ರೀಂ ಕೋರ್ಟ್‌ನಲ್ಲೂ ಇದೇ ವಿಷಯದ ಕುರಿತಾಗಿ ವಿಚಾರಣೆ ನಡೆಯುತ್ತಿದ್ದು, ತ್ವರಿತ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೇಂದ್ರದ ವಕೀಲರು ಶುಕ್ರವಾರ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಈ ಮನವಿ ಆಲಿಸಿದ ನಂತರ ಪೀಠ ವಿಚಾರಣೆಯನ್ನು ಮೇ 9, 2024ಕ್ಕೆ ನಿಗದಿಪಡಿಸಿದೆ.

ಗುಟ್ಕಾ ಕಂಪನಿಗಳ ಜಾಹೀರಾತಿನಲ್ಲಿ ಪಾಲ್ಗೊಂಡಿರುವ ನಟರು ಮತ್ತು ಗಣ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಾದಿಸಿರುವ ಅರ್ಜಿದಾರರ ಪ್ರಾತಿನಿಧ್ಯವನ್ನು ನಿರ್ಧರಿಸುವಂತೆ ನ್ಯಾಯಮೂರ್ತಿ ರಾಜೇಶ್ ಸಿಂಗ್ ಚೌಹಾಣ್ ಅವರಿದ್ದ ಪೀಠವು ಈ ಹಿಂದೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಕ್ಟೋಬರ್ 22ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಸಹ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು. ಬಳಿಕ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತ್ತು.

ಶುಕ್ರವಾರ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಸ್‌.ಬಿ. ಪಾಂಡೆ ಅವರು ನಟ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಹೈಕೋರ್ಟ್‌ಗೆ ಹೇಳಿದರು.

ಇನ್ನೊಂದೆಡೆ ಗುಟ್ಕಾ ಕಂಪನಿಯೊಂದಿಗಿನ ಒಪ್ಪಂದವನ್ನು ರದ್ದುಗೊಳಿಸಿದ್ದರೂ ಕೂಡ ತಮ್ಮನ್ನು ಒಳಗೊಂಡ ಜಾಹೀರಾತನ್ನು ತೋರಿಸುತ್ತಿರುವುದರ ವಿರುದ್ಧ ನಟ ಅಮಿತಾಬ್ ಬಚ್ಚನ್ ಗುಟ್ಕಾ ಕಂಪನಿಯೊಂದಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಹೈಕೋರ್ಟ್​ನ ಲಖನೌ ಪೀಠವು ಪ್ರಕರಣದ ಮುಂದಿನ ವಿಚಾರಣೆಯನ್ನು 2024ಕ್ಕೆ ನಿಗದಿಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!