ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿರುವ ಈ ಸಮಯದಲ್ಲಿ, ಸರ್ಕಾರಿ ಶಾಲಾ ಶಿಕ್ಷಕರು ಮತ್ತು ಪದವಿಪೂರ್ವ ಕಾಲೇಜು ಉಪನ್ಯಾಸಕರನ್ನು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿಸಬಾರದು ಎಂದು ಶಾಲಾ ಶಿಕ್ಷಣ ಇಲಾಖೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಬೋಧಕರನ್ನು ಪಾಠದ ಕೆಲಸ ಬಿಟ್ಟು ಬೇರೆ ಜವಾಬ್ದಾರಿಗಳಿಗೆ ನಿಯೋಜಿಸಿದರೆ ವಿದ್ಯಾರ್ಥಿಗಳ ಕಲಿಕೆ ಹಾಗೂ ಪರೀಕ್ಷಾ ಸಿದ್ಧತೆಗೆ ದೊಡ್ಡ ಪೆಟ್ಟು ಬೀಳಲಿದೆ ಎಂದು ಇಲಾಖೆ ಕಳವಳ ವ್ಯಕ್ತಪಡಿಸಿದೆ.
ಈ ಕುರಿತು ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಅವರು ನವೆಂಬರ್ 17ರಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಕಳೆದ ಜೂನ್ನಿಂದ ಅಕ್ಟೋಬರ್ವರೆಗೆ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ವೇಳೆ ರಾಜ್ಯದ ಸುಮಾರು ಶೇ. 30ರಷ್ಟು ಶಿಕ್ಷಕರನ್ನು ಬಳಸಿಕೊಳ್ಳಲಾಗಿತ್ತು. ಇದರಿಂದ ವಿಶೇಷವಾಗಿ ಬೆಂಗಳೂರಿನಲ್ಲಿ ತರಗತಿ ಬೋಧನೆ ಮತ್ತು ಪಠ್ಯ ಪೂರ್ಣಗೊಳಿಸಲು ಸಾಕಷ್ಟು ತೊಂದರೆಯಾಗಿತ್ತು.
ಅಲ್ಲದೆ, ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಶಿಕ್ಷಕರು ವಾರಕ್ಕೆ ಕನಿಷ್ಠ 45 ಗಂಟೆಗಳ ಕಾಲ ಪಾಠ ಸಿದ್ಧತೆ ಮತ್ತು ಬೋಧನೆಯಲ್ಲಿ ತೊಡಗಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಹೆಚ್ಚುವರಿ ಕೆಲಸ ನೀಡುವುದು ಕಾಯ್ದೆಗೆ ವಿರುದ್ಧವಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:
ಮುಂದಿವೆ ಸಾಲು ಸಾಲು ಪರೀಕ್ಷೆಗಳು
ಪ್ರಸ್ತುತ ಶೈಕ್ಷಣಿಕ ವರ್ಷದ ಕೊನೆಯ ಹಂತ ನಡೆಯುತ್ತಿದ್ದು, ಉಳಿದ ಪಠ್ಯ ಮುಗಿಸಲು ಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. 2027ರ ಜನವರಿ 4ರಿಂದ ಫೆಬ್ರವರಿ 27ರವರೆಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮೂರು ಪೂರ್ವಸಿದ್ಧತಾ ಪರೀಕ್ಷೆಗಳು ಹಾಗೂ ಮಾರ್ಚ್ 22ರಿಂದ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಅದೇ ರೀತಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜನವರಿ 2ರಿಂದ ಪೂರ್ವಸಿದ್ಧತಾ ಪರೀಕ್ಷೆಗಳು ಮತ್ತು ಫೆಬ್ರವರಿ 27ರಿಂದ ಅಂತಿಮ ಪರೀಕ್ಷೆಗಳು ಶುರುವಾಗಲಿವೆ.
ಹೀಗಾಗಿ, ಡಿಸೆಂಬರ್ 1ರಿಂದ ಆರಂಭವಾಗಲಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯದಿಂದ ಶಾಲಾ-ಕಾಲೇಜು ಬೋಧಕ ಸಿಬ್ಬಂದಿಯನ್ನು ಕೈಬಿಡುವಂತೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಇಲಾಖೆ ಮನವಿ ಮಾಡಿದೆ. ಇದರ ಜೊತೆಗೆ, ಶಿಕ್ಷಕರನ್ನು ಬೋಧನೇತರ ಕೆಲಸಗಳಿಗೆ ಬಳಸುವುದನ್ನು ನಿಯಂತ್ರಿಸಲು ಪ್ರತ್ಯೇಕ ಕಾಯ್ದೆ ತರುವ ಬಗ್ಗೆಯೂ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.



