ಇಂದಿನಿಂದ SSLC ಪೂರಕ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಬಂದೋ ಬಸ್ತ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಆರಂಭವಾಗಲಿವೆ. ಜೂ. 19ರ ವರೆಗೆ ಪರೀಕ್ಷೆಗಳು ನಡೆಯಲಿದ್ದು, ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಪರೀಕ್ಷೆಗೆ 1.11 ಲಕ್ಷ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಒಟ್ಟು 458 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗಾಗಿ 11,810 ಶಾಲೆಗಳು ನೋಂದಣಿ ಮಾಡಿಕೊಂಡಿವೆ.

ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಿಗದಿತ ದಿನಾಂಕದಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಜಿರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿಧ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಗಿ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ.

ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಜೂನ್ 12 ರಿಂದ 19ರ ವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ಪರೀಕ್ಷಾ ಕೇಂದ್ರಗಳಿಂದ ಮನೆಗೆ ವಾಪಸ್ ತೆರಳುವಾಗ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಸಾರಿಗೆ ಸಂಸ್ಥೆಯ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!