ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ನಾಲ್ಕು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯದ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಕೊನೆಗೂ ಕಾಲ ಕೂಡಿಬಂದಿದೆ. ಕರ್ನಾಟಕದ 30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯಿತಿ ಹಾಗೂ 234 ತಾಲೂಕು ಪಂಚಾಯಿತಿಗಳ ಒಟ್ಟು 3,580 ಸ್ಥಾನಗಳಿಗೆ ರಾಜ್ಯ ಸರ್ಕಾರ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ, ವಿಶೇಷ ರಾಜ್ಯ ಪತ್ರದ ಮೂಲಕ ಅಧಿಸೂಚನೆ ಹೊರಡಿಸಿದೆ.
ಈ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ, “2027ರ ಜನವರಿ ತಿಂಗಳಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಈ ಬಾರಿ ವಿದ್ಯುನ್ಮಾನ ಮತಯಂತ್ರಗಳ ಬದಲಾಗಿ ಬ್ಯಾಲೆಟ್ ಪೇಪರ್ ಮೂಲಕವೇ ಮತದಾನ ನಡೆಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.
ಚುನಾವಣೆ ವಿಳಂಬವಾಗಿದ್ದು ಏಕೆ?
2022ರಲ್ಲೇ ಸ್ಥಳೀಯ ಸಂಸ್ಥೆಗಳ ಅಧಿಕಾರಾವಧಿ ಮುಕ್ತಾಯಗೊಂಡಿತ್ತು. ಆದರೆ, ಹಲವು ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಿದ್ದು ಮತ್ತು ಕೆಲವು ಗ್ರಾಮೀಣ ಪ್ರದೇಶಗಳನ್ನು ಸಮೀಪದ ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಗೆ ಸೇರ್ಪಡೆಗೊಳಿಸಿದ್ದರಿಂದ ಕ್ಷೇತ್ರಗಳ ಭೌಗೋಳಿಕ ಗಡಿಗಳನ್ನು ಮರುವಿಂಗಡಣೆ ಮಾಡುವುದು ಅನಿವಾರ್ಯವಾಗಿತ್ತು. ಈ ಪ್ರಕ್ರಿಯೆಗಳು ಪೂರ್ಣಗೊಳ್ಳದ ಕಾರಣ ಚುನಾವಣೆ ವಿಳಂಬವಾಗಿತ್ತು ಎಂದು ಸಚಿವರು ವಿವರಿಸಿದರು.
ಇದನ್ನೂ ಓದಿ:
ಮತದಾರರ ಪಟ್ಟಿ ಮತ್ತು ದಿನಾಂಕ ಆಯೋಗಕ್ಕೆ ಬಿಟ್ಟಿದ್ದು
“ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ನಿಗದಿಪಡಿಸುವ ಸರ್ಕಾರದ ಜವಾಬ್ದಾರಿ ಪೂರ್ಣಗೊಂಡಿದೆ. ಹಳೆಯ ಮತದಾರರ ಪಟ್ಟಿಯನ್ನೇ ಬಳಸುವಂತೆ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಯಾವ ಮತದಾರರ ಪಟ್ಟಿ ಬಳಸಬೇಕು, ಚುನಾವಣಾ ವೇಳಾಪಟ್ಟಿ ಮತ್ತು ನೀತಿ ಸಂಹಿತೆಯನ್ನು ಯಾವಾಗ ಜಾರಿಗೊಳಿಸಬೇಕು ಎಂಬ ಅಂತಿಮ ನಿರ್ಧಾರ ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟಿದ್ದು” ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಮೀಸಲಾತಿ ಪಟ್ಟಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ರಾಜಕಾರಣದಲ್ಲಿ ಸಂಚಲನ ಮೂಡಿದ್ದು, ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ತಮ್ಮ ನಾಯಕರ ಸುತ್ತ ಪ್ರದಕ್ಷಿಣೆ ಹಾಕಲು ಶುರುಮಾಡಿದ್ದಾರೆ.



