ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಪುರಿ ಜಗನ್ನಾಥ ದೇಗುಲದ ಐತಿಹಾಸಿಕ ರಥಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.
ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜಗನ್ನಾಥ, ಬಲಭದ್ರ ಮತ್ತು ಸುಭದ್ರ ದೇವಿಯ ವಿಗ್ರಹಗಳನ್ನು ಹೊತ್ತ ಮೂರು ರಥಗಳು ಯಾತ್ರೆ ಪ್ರಾರಂಭವಾಗಿವೆ. ಜಗನ್ನಾಥ ದೇವಸ್ಥಾನದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಶ್ರೀ ಗುಂಡಿಚಾ ದೇವಸ್ಥಾನದ ಬಳಿ ಇದ್ದಾಗ ಈ ಘಟನೆ ಸಂಭವಿಸಿದೆ.
ಮೃತಪಟ್ಟ ಮೂವರೂ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪರೀಕ್ಷೆಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ ಎಂದು ಪುರಿ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಹೇಳಿದ್ದಾರೆ.
ಇನ್ನು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಸರ್ಕಾರ ಅಧಿಕಾರಿಗಳ ತಲೆದಂಡ ಮಾಡಿದೆ. ಪುರಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಿದೆ. ಮಾತ್ರವಲ್ಲದೇ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ದೇವಾಲಯದ ಕಾಲ್ತುಳಿತದ ನಂತರ ಪುರಿ ಕಲೆಕ್ಟರ್ ಸಿದ್ಧಾರ್ಥ್ ಎಸ್ ಸ್ವೈನ್ ಮತ್ತು ಎಸ್ಪಿ ಬಿನಿತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.