ಪ್ರಾಧಿಕಾರದಿಂದ ರಾಜ್ಯದ ಗಡಿ ಪ್ರದೇಶದ ಸ್ಥಿತಿಗತಿ ಅಧ್ಯಯನ: ಡಾ.ಸಿ.ಸೋಮಶೇಖರ

ಹೊಸ ದಿಗಂತ ವರದಿ, ಮಡಿಕೇರಿ:

ರಾಜ್ಯದ ಗಡಿ ಭಾಗದ ಜನರ ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಸ್ಥಿತಿಗತಿ ಬಗ್ಗೆ ಅಧ್ಯಯನ ಮಾಡುವ ನಿಟ್ಟಿನಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಬಿಡುಗಡೆಯಾಗಿರುವ ಅನುದಾನ, ಹಣ ಬಳಕೆ ಪ್ರಮಾಣ ಪತ್ರ ಹಾಗೂ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.
ರಾಜ್ಯದ 19 ಜಿಲ್ಲೆಗಳ 63 ತಾಲೂಕುಗಳ ಹಾಗೂ 6 ರಾಜ್ಯಗಳ (ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಗೋವಾ) ಗಡಿ ಪ್ರದೇಶವನ್ನು ಹೊಂದಿದ್ದು, ಗಡಿ ಭಾಗದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಮತ್ತಷ್ಟು ಪ್ರಯತ್ನಗಳು ನಡೆಯಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯದ 998 ಗ್ರಾಮಗಳು ಗಡಿ ಪ್ರದೇಶದ ವ್ಯಾಪ್ತಿಯಲ್ಲಿ ಬರುತ್ತವೆ. ಈ ಪ್ರದೇಶದಲ್ಲಿ ಕನ್ನಡ ಅಸ್ಮಿತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಹಲವು ಸಾಂಸ್ಕೃತಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಗಡಿ ಪ್ರದೇಶದ ಗ್ರಾಮಗಳಿಗೆ ತಿಂಗಳಿಗೊಮ್ಮೆಯಾದರೂ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡಿ, ಸಾರ್ವಜನಿಕರ ಕುಂದುಕೊರತೆ ಆಲಿಸುವಂತಾಗಬೇಕು ಎಂದು ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಅವರು ನಿರ್ದೇಶನ ನೀಡಿದರು
ಗಡಿ ಪ್ರದೇಶದ ಗ್ರಾಮಗಳಲ್ಲಿ ಕನ್ನಡದ ಅಸ್ಮಿತೆಯನ್ನು ಹೆಚ್ಚಿಸುವಲ್ಲಿ ಅಗತ್ಯ ಕಾರ್ಯಕ್ರಮ ರೂಪಿಸಬೇಕು. ಗಡಿ ಭಾಗದ ಜನರಲ್ಲಿ ಕನ್ನಡ ಭಾಷೆ, ಸಂಸ್ಕೃತಿಯನ್ನು ಉತ್ತೇಜಿಸುವಲ್ಲಿ ಪ್ರಯತ್ನಗಳು ಮುಂದುವರೆಯಬೇಕು ಎಂದು ನುಡಿದರು.
ಜಿಲ್ಲೆಯ ಗಡಿ ಪ್ರದೇಶದಲ್ಲಿ ಕೊಡಗಿನ ಇತಿಹಾಸ, ದಾರ್ಶನಿಕರನ್ನು ಒಳಗೊಂಡ ಕಿರುಪುಸ್ತಕ ಪ್ರಕಟ, ಸ್ವಾತಂತ್ರ್ಯ ಹೋರಾಟ ಗಾರರ ಸ್ಮಾರಕಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಅಗತ್ಯ ನೆರವು ನೀಡಲಾಗುವುದು ಎಂದರು.
ಯುವಕ, ಯುವತಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದು ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸೂಚಿಸಿದರು. ಸಮಾಜ ಕಲ್ಯಾಣ ಹಾಗೂ ಗಿರಿಜನ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳ ಸ್ಥಿತಿಗತಿ ಸುಧಾರಣೆ ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಡಾ..ಸೋಮಶೇಖರ್   ಹೇಳಿದರು.
ಸ್ಮಾರ್ಟ್ ಕ್ಲಾಸ್‍ಗೆ ಹಣ ಒದಗಿಸಲಾಗುತ್ತಿದೆ. ಗಡಿ ಭಾಗದಲ್ಲಿ ಯರವ ಭಾಷೆಯ ಜೊತೆ ಕನ್ನಡ ಭಾಷೆ ಕಲಿಸುವಂತಾಗಬೇಕು ಎಂದರು.
ಗಡಿ ಚೇತನ ಪ್ರಶಸ್ತಿ: ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಗಡಿ ಚೇತನ ಪ್ರಶಸ್ತಿಯನ್ನು ಆರಂಭಿಸಲಾಗಿದ್ದು, ಈಗಾಗಲೇ ಕಯ್ಯಾರ ಕಿಂಞಣ್ಣ ರೈ, ಜಯದೇವಿ ತಾಯಿ ಲಿಗಾಡೆ ಅವರಿಗೆ ಪ್ರಶಸ್ತಿ ವಿತರಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ದಾರ್ಶನಿಕರು, ಸಂತರ ಸ್ಮಾರಕವನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ಕಿರು ಪುಸ್ತಕ ಪ್ರಕಟಿಸುವಂತಾಗಬೇಕು ಎಂದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮಾತನಾಡಿ, ಗಡಿ ಪ್ರದೇಶದ ಶಾಲೆಗಳಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪಿಸಲಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದೆ. ಬೀದಿ ದೀಪ ಅಳವಡಿಕೆ, ಶಾಲೆಗಳಲ್ಲಿ ತಡೆಗೋಡೆ ನಿರ್ಮಾಣ, ಹೀಗೆ ಗಡಿ ಪ್ರದೇಶದ ಶಾಲೆಗಳು, ಅಂಗನವಾಡಿಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಅವರು, 2019 ರಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ಮುಂದುವರೆದ ಕಾಮಗಾರಿಗೆ ರಾಜ್ಯ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 50 ಲಕ್ಷ ರೂ. ಬಿಡುಗಡೆಗೆ ಆದೇಶವಾಗಿದ್ದು, ಈ ಸಂಬಂಧ ಅನುದಾನ ಬಿಡುಗಡೆಗೆ ಅಧ್ಯಕ್ಷರಲ್ಲಿ ಕೋರಿದರು.
ಗಾಂಧಿ ಮಂಟಪದ ಆವರಣದಲ್ಲಿ ಗಾಂಧಿ ಸ್ಮಾರಕ ಉದ್ಯಾನವನ ಅಭಿವೃದ್ಧಿಗೆ ಅಗತ್ಯ ಸಹಕಾರಕ್ಕೆ ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಯೋಜನಾ ನಿರ್ದೇಶಕ ಜಗದೀಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!