ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಲೋಕಾಯುಕ್ತ ತಿದ್ದುಪಡಿ (2022) ಕಾಯ್ದೆಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದೆ.
ಲೋಕಾಯುಕ್ತ ಬಲಪಡಿಸುವ ಸಂಬಂಧ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟದಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ಹೆಚ್ಚುವರಿ (ಅಡಿಷನಲ್) ರಿಜಿಸ್ಟ್ರಾರ್ ನೇಮಕಕ್ಕೂ ಸಚಿವ ಸಂಪುಟ ನಿರ್ಧರಿಸಿದೆ.
ಲೋಕಾಯುಕ್ತ ನ್ಯಾಯಮೂರ್ತಿಗಳ ವೇತನ ಹೆಚ್ಚಿಸಿ, ಹೈಕೋರ್ಟ್ ನ್ಯಾಯಮೂರ್ತಿಗಳ ವೇತನಕ್ಕೆ ಸರಿಸಮಾನವಾದ ವೇತನ ನೀಡಲು ಸಂಪುಟ ಒಪ್ಪಿಗೆ ಸೂಚಿಸಿದೆ.
ಕರ್ನಾಟಕ ಸರ್ಕಾರವು ಹೊಸದಾಗಿ ಜಾರಿಗೆ ತಂದಿದ್ದ ಭ್ರಷ್ಟಾಚಾರ ನಿಗ್ರಹ ದಳ (ACB) ರಚನೆಯನ್ನು ರದ್ದುಪಡಿಸಿ, ಹಿಂದಿನಿಂದಲೂ ಅಸ್ತಿತ್ವದಲ್ಲಿದ್ದ ಲೋಕಾಯುಕ್ತ ಸಂಸ್ಥೆಗೆ ಬಲ ತುಂಬಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇದೇ ವೇಳೆ ವಿಧಾನ ಪರಿಷತ್ ಸಭಾಪತಿ, ಉಪಸಭಾಪತಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಬುಧವಾರದೊಳಗೆ ಚುನಾವಣೆ ನಡೆಸುವ ಸಾಧ್ಯತೆ ಇದೆ. ವಿಧಾನ ಪರಿಷತ್ ಸಭಾಪತಿ ಮತ್ತು ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯಪಾಲರಿಗೆ ನಾಳೆ ಸರ್ಕಾರದಿಂದ ಪತ್ರ ರವಾನಿಸಲಾಗುವುದು. ಲೋಕಾಯುಕ್ತ ಬಲಪಡಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.