ಕಾವೇರಿ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲ: ಬಿಜೆಪಿ ಆರೋಪ

ಹೊಸದಿಗಂತ ವರದಿ, ಮಂಡ್ಯ :

ರಾಜ್ಯದ ಸಂಕಷ್ಟ ಪರಿಸ್ಥಿತಿಯನ್ನು ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್ ಆರೋಪಿಸಿದರು.

ಬಿಜೆಪಿ ವಿಕಾಸ ಭವನದಲ್ಲಿ ನಡೆದ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ವ್ಯಾಪಕ ಮಳೆಯಾಗದೆ ಈ ಭಾಗದ ಎಲ್ಲ ಜಲಾಶಯಗಳಲ್ಲೂ ನೀರಿನ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ಪ್ರಾಧಿಕಾರಕ್ಕೆ ರಾಜ್ಯದ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ಡಿಸಿಎಂ ಶಿವಕುಮಾರ್ ಅವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ದೂರಿದರು.

ಆಪರೇಷನ್ ಹಸ್ತ ಮಾಡಲು ಆಸಕ್ತಿ 
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮಂತ್ರಿಗಳು ಆಪರೇಷನ್ ಹಸ್ತ ಕಾರ್ಯಾಚರಣೆಯಲ್ಲಿ ಮುಳುಗಿಹೋಗಿದ್ದಾರೆ. ರೈತರ ಹಿತ ಅವರಿಗೆ ಬೇಕಾಗಿಲ್ಲ. ತಮಿಳುನಾಡಿಗೆ ನೀರು ಹರಿಸುವ ಮೂಲಕ ಕಾವೇರಿ ಪ್ರಾಂತ್ಯದ ರೈತರನ್ನು ಬಲಿಕೊಡಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.

ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಹಾಗೂ ಎಂ.ಬಿ. ಪಾಟೀಲ್ ಅವರು ಕಾವೇರಿ ನದಿ ಪ್ರಾಧಿಕಾರದ ಸಭೆ ಅಥವಾ ಸುಪ್ರೀಂ ಕೋರ್ಟಿನಲ್ಲಿ ಈ ಬಗ್ಗೆ ವಿಚಾರಣೆಗೆ ಬಂದಾಗಲೆಲ್ಲಾ ರಾಜ್ಯದ ಪರ ಕಾನೂನು ತಂಡದೊಂದಿಗೆ ಇದ್ದು, ಅವರಿಗೆ ಸರಿಯಾದ ಮಾಹಿತಿ ನೀಡುತ್ತಿದ್ದರು. ಆದರೆ ಈ ಕೆಲಸವನ್ನು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮರೆತು ಕೇವಲ ಆಪರೇಷ್ ಹಸ್ತ ಮಾಡಲು ಟೊಂಕ ಕಟ್ಟಿ ನಿಂತಿದ್ದಾರೆ ಎಂದು ಟೀಕಿಸಿದರು.

ಅಭ್ಯರ್ಥಿಯನ್ನೇ ಹಾಕಿಲ್ಲ 
ನೂರು ವರ್ಷದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೂರ್ನಾಲ್ಕು ಬಾರಿ ಅಭ್ಯರ್ಥಿಯನ್ನೇ ಕಣಕ್ಕಿಳಿಸಿಲ್ಲ. ಬಿಜೆಪಿ ಪಕ್ಷದಲ್ಲಿ ಕಾರ‌್ಯಕರ್ತರನ್ನೇ ಅಭ್ಯರ್ಥಿಗಳನ್ನಾಗಿ ಮಾಡಿರುವ ಸಾಕಷ್ಟು ಉದಾಹರಣೆಗಳು ಇವೆ. ಈ ಬಾರಿಯೂ ಪಕ್ಷದ ಸಮರ್ಥ ಕಾರ‌್ಯಕರ್ತರಿಗೆ ಪಕ್ಷ ಟಿಕೆಟ್ ನೀಡುತ್ತದೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರು ಕಾರ‌್ಯಕರ್ತರು ಒಟ್ಟಾಗಿ ಶ್ರಮಿಸಲಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!