ಹೊಸದಿಗಂತ ವರದಿ ಚಿತ್ರದುರ್ಗ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೂರೂವರೆ ವರ್ಷಗಳಲ್ಲಿ ಜನಸಾಮಾನ್ಯರು ಬದುಕು ನಡೆಸುವುದು ದುಸ್ತರವಾಗಿದೆ. ಸ್ವಾತಂತ್ರ್ಯದ ನಂತರ ಇಂತಹ ಕೆಟ್ಟ ಸರ್ಕಾರವನ್ನು ಜನರು ಎಂದೂ ನೋಡಿರಲಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರದ ನೀತಿಗಳಿಂದ ಮಹಿಳೆಯರು, ರೈತರು ಹಾಗೂ ಬಡವರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಗೆ ಶೇಕಡಾ 40 ರಷ್ಟು ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಮುಖಂಡರು, ಪ್ರಸ್ತುತ ಸರ್ಕಾರದ ಅವಧಿಯಲ್ಲಿ ಶೇಕಡಾ 60 ಕ್ಕಿಂತ ಹೆಚ್ಚಾಗಿದೆ. ನೀರಾವರಿ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿರುವ ಗುತ್ತಿಗೆದಾರರಿಗೆ ಕಳೆದ ಮೂರೂವರೆ ವರ್ಷಗಳಿಂದ ಹಣ ಬಿಡುಗಡೆಯಾಗಿಲ್ಲ ಎಂದರು.
ರಾಜ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಸೇರಿದಂತೆ ವಿವಿಧ ತೆರಿಗೆಗಳನ್ನು ಗಣನೀಯವಾಗಿ ಏರಿಕೆ ಮಾಡಿದೆ. ಬಸ್‌ದರ, ಗ್ರಾಮೀಣ ಪ್ರದೇಶದ ಬಿಬಿಎಂಪಿ ವ್ಯಾಪ್ತಿ ಹಾಗೂ ಕೆಎಸ್‌ಆರ್‌ಟಿಸಿ ದರಗಳನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ. ಇದರಿಂದಾಗಿ ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನಸಾಮಾನ್ಯರು ರೇಷನ್ ಅಂಗಡಿಯಲ್ಲೂ ಸಾಮಗ್ರಿಗಳನ್ನು ಖರೀದಿಸಲು ಪರದಾಡುವಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಇದನ್ನೂ ಓದಿ:
ಇನ್ನು ಕೇವಲ ಒಂದು ವರ್ಷ ಮಾತ್ರ ಚುನಾವಣೆ ಬಾಕಿ ಇದ್ದು, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಪ್ರಭಾವಿ ಸಚಿವರು ಹಾಗೂ ಶಾಸಕರಿಗೆ ಮುಂಬರುವ ಚುನಾವಣೆಯಲ್ಲಿ ಶೇಕಡಾ 50 ರಷ್ಟು ಸೋಲಿನ ಭೀತಿ ಕಾಡುತ್ತಿದೆ. ರಾಜ್ಯ ಸರ್ಕಾರದ ಆರ್ಥಿಕ ದುಸ್ಥಿತಿ ಮತ್ತು ತೀವ್ರ ತೆರಿಗೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು. ಆಡಳಿತ ವೈಫಲ್ಯ ಸರಿಪಡಿಸಿಕೊಳ್ಳಬೇಕು. ತಪ್ಪಿದಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದೆ ಶಾಸಕರು ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಉಚಿತ ಯೋಜನೆಗಳ ಹೆಸರಿನಲ್ಲಿ ಮಹಿಳೆಯರಿಗೆ ಮೋಸ ಮಾಡಲಾಗುತ್ತಿದೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರೈತರ ಪರವಾಗಿ ಸರ್ಕಾರ ಸ್ಪಂದಿಸಿಲ್ಲ. ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೇರವಾಗಿ ರೈತರ ಖಾತೆಗೆ 6000 ರೂಪಾಯಿಗಳನ್ನು ಜಮಾ ಮಾಡುತ್ತಿದ್ದರೆ, ರಾಜ್ಯ ಸರ್ಕಾರದವರು ಈ ಹಿಂದೆ ನೀಡುತ್ತಿದ್ದ ಹೆಚ್ಚುವರಿ ಹಣವನ್ನು ನಿಲ್ಲಿಸಿದ್ದಾರೆ ಎಂದು ಆರೋಪಿಸಿದರು.



