October 6, 2026
Tuesday, October 6, 2026
spot_img

ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕಪಟ ನಾಟಕ ಆಡುತ್ತಿದೆ : ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ವರದಿ ಧಾರವಾಡ:

ರಾಜ್ಯದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಯನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ತನ್ನ ವೈಫಲ್ಯಗಳು ಮುಚ್ಚಿಕೊಳ್ಳಲು ಕಪಟ ನಾಟಕ ಆಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದರು.

ಮಂಗಳವಾರ ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್.ವಿ.ಸಂಕನೂರ ಅವರ ನಾಮಪತ್ರ ಸಲ್ಲಿಕೆಗೂ ಮೊದಲು ಸುದ್ದಿಗೋಷ್ಠಿಯಲ್ಲಿ ಪಕ್ಷದ ಒಗ್ಗಟ್ಟು ಮತ್ತು ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದರು. 138ಕ್ಕೂ ಹೆಚ್ಚು ಶಾಸಕರಿದ್ದರೂ ಕಾಂಗ್ರೆಸ್ ಸರ್ಕಾರದಲ್ಲಿ ಅಸ್ಥಿರತೆ ಕಾಡುತ್ತಿದೆ. ಸ್ವತಃ ಮುಖ್ಯಮಂತ್ರಿಗಳೇ ಚುನಾವಣಾ ಆಯೋಗದ ಮುಂದೆ ಧರಣಿ ಕುಳಿತು ನಾಟಕ ಮಾಡುತ್ತಿದ್ದಾರೆ ಎಂದು ದೂರಿದರು.

ಸಂಕಷ್ಟದಲ್ಲಿ ಬೆಲೆ ಏರಿಕೆ?: ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೋಢೀಕರಿಸಲು ಸಾಧ್ಯವಾಗದೇ ಸರ್ಕಾರ ಪರದಾಡುತ್ತಿದೆ. ಕೆಎಸ್‌ಆರ್‌‌ಟಿಸಿಗೆ 6,500 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, ಸಿಬ್ಬಂದಿಗೆ ಸಂಬಳ ನೀಡಲು ಸಾಧ್ಯವಾಗದ ಸ್ಥಿತಿ ತಲುಪಿದೆ ಎಂದು ಗಂಭೀರ ಆರೋಪ ಮಾಡಿದರು.

ಅಬಕಾರಿ ಇಲಾಖೆಯ ದುರ್ಬಳಕೆ:
ಅಭಿವೃದ್ಧಿ ಬಿಟ್ಟು ಕೇವಲ ಬೆಲೆ ಏರಿಕೆ ಹಾಗೂ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುವ ಮೂಲಕ ಅಬಕಾರಿ ಆದಾಯವನ್ನು 11,598 ಕೋಟಿ ರೂ.ಗೆ ಹೆಚ್ಚಿಸಿಕೊಂಡಿದ್ದೇ ಸರ್ಕಾರದ ಸಾಧನೆ ಎಂದು ವ್ಯಂಗ್ಯವಾಡಿದರು.

ರೈತರ ನಿರ್ಲಕ್ಷ್ಯ- ವಿದ್ಯುತ್ ಅಭಾವ:
ತೀವ್ರ ಬರಗಾಲವಿದ್ದರೂ ರೈತರಿಗೆ ಸೂಕ್ತ ಪರಿಹಾರ ತಲುಪಿಲ್ಲ. ವಿದ್ಯುತ್ ಅಭಾವದಿಂದಾಗಿ ದಿನಕ್ಕೆ 7 ಗಂಟೆ ಉಚಿತ ವಿದ್ಯುತ್ ನೀಡಲು ಸರ್ಕಾರ ವಿಫಲವಾಗಿದೆ ಎಂದು ಆರೋಪ ಮಾಡಿದರು.

ಪೊಲೀಸ್ ಇಲಾಖೆ ದುರ್ಬಳಕೆ:
ರಾಜ್ಯದ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿ ಬದಲಾಗಿವೆ. ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಎಫ್‌ಐಆರ್ ದಾಖಲಿಸಿ ಬೆದರಿಸುವ ತಂತ್ರ ಹೆಣೆಯಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಮುಂದಿನ ದಿನಗಳಲ್ಲಿ ನಡೆಯುವ ಎಂಎಲ್‌ಸಿ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ-ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಮೇಲುಗೈ ಸಾಧಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

Must Read