ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರಣಾಂತಿಕ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ರಾಜ್ಯದ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ರಾಜ್ಯ ಸರ್ಕಾರವು ವಿಶೇಷ ಕಾಳಜಿ ವಹಿಸಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೊಂದಿಕೊಂಡಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ವಸತಿ ಶಾಲೆಯೊಂದನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಯಂಸೇವಾ ಸಂಸ್ಥೆಯೊಂದಕ್ಕೆ ಪೂರಕ ಮಾಹಿತಿಯನ್ನು ಸಂಗ್ರಹಿಸಿ, ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸೂಕ್ತ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸುವಂತೆ ಈ ಹಿಂದೆ ಸೂಚಿಸಲಾಗಿತ್ತು. ಈಗಾಗಲೇ ಪಡೆದುಕೊಳ್ಳಲಾಗಿರುವ ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ರಾಜ್ಯದಲ್ಲಿ ಕ್ಯಾನ್ಸರ್ ಕಾಯಿಲೆಯಿಂದ ಬಾಧಿತರಾಗಿರುವ ಸುಮಾರು 3,500 ಮಕ್ಕಳು ಇರಬಹುದೆಂದು ಅಂದಾಜಿಸಲಾಗಿದೆ. ಕ್ಯಾನ್ಸರ್ ಗುಣಪಡಿಸಬಹುದಾದ ಕಾಯಿಲೆ ಆಗಿರುವುದರಿಂದ ಅವರ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಸರ್ಕಾರದ ವತಿಯಿಂದಲೇ ಚಿಕಿತ್ಸೆ ಕೊಡಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.