ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಸಂಜೆ 5 ಗಂಟೆ ತನಕ ವಸೂಲಿಗೆ ಹೋಗಲು ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.
ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು. ಈ ವೇಳೆ ಬೆಳಿಗ್ಗೆ 10 ರಿಂದ 5ಗಂಟೆ ವರೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಹೋಗಿ ಎಂಬ ಮಾತನ್ನು ರಾಜ್ಯ ಸರ್ಕಾರ ಹೇಳುತ್ತಿರುವುದು ದುರ್ದೈವದ ಸಂಗತಿ. ಒಂದು ಕಡೆ ತಮ್ಮ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಜನರು ಸಮೃದ್ಧರಾಗಿದ್ದಾರೆ. ಆಲ್ ಈಸ್ ವೆಲ್ ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದು ಕಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದೌರ್ಜನ್ಯ ಮತ್ತು ಭರಾಟೆಯಿಂದ ರಾಜ್ಯದಲ್ಲಿ ಬಡವರು, ಮಹಿಳೆಯರು, ಕೂಲಿ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.
ಮೈಕ್ರೋ ಫೈನಾನ್ಸ್ ಹಾವಳಿಯ ಕುರಿತು ಬಹಳಷ್ಟು ಚರ್ಚೆ ಆಗುತ್ತಿದೆ. ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಕ್ರೋ ಫೈನಾನ್ಸ್ ವಸೂಲಾತಿ ದೌರ್ಜನ್ಯದಿಂದ ಭಯಭೀತರಾಗಿ ಹಣ ಮರುಪಾವತಿ ಮಾಡಲು ಸಾಧ್ಯವಾಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವ್ಯೂಹಕ್ಕೆ ಬಡವರು ಸಿಲುಕಿದ್ದಾರೆ. ರಾಜ್ಯ ಸರ್ಕಾರದ ದೌರ್ಜನ್ಯಕ್ಕೆ ಅವಕಾಶ ಕೊಡುವುದನ್ನು ಬದಿಗಿಟ್ಟು ಮುಗ್ಧ ಬಡಜನರ, ರೈತರ ರಕ್ಷಣೆಗೆ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದಲ್ಲಿ ಚುನಾಯಿತ ಸರ್ಕಾರ, ಮುಖ್ಯಮಂತ್ರಿಗಳು ಇದ್ದಾರಾ? ಸರ್ಕಾರ ರಾಜ್ಯದ ಅಭಿವೃದ್ಧಿ ಸೇರಿ ಎಲ್ಲವನ್ನೂ ಮರೆತಿದೆ. ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣ ಮಾಡಿಕೊಂಡಿದೆ ಎಂದಿದ್ದಾರೆ.