ಹೊಸದಿಗಂತ ವರದಿ,ಮಂಗಳೂರು:
ಜನತೆಗೆ ತಪ್ಪು ಮಾಹಿತಿ ನೀಡುವ ಮೂಲಕ ಹಾದಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಅವರು ಶನಿವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.
ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ, ಅದು ಬಿಟ್ಟು ಭಯೋತ್ಪಾದನೆಗೆ ಸಹಕಾರ ನೀಡುತ್ತೇನೆಂದು ಹೇಳಿದ್ದಾರೆಯೇ?. ಬಿಜೆಪಿಯವರು ಅದನ್ನು ಅನುಕೂಲಕ್ಕೆ ತಕ್ಕಂತೆ ತಿರುಚಿ ಜನತೆಯ ಮುಂದೆ ತಪ್ಪು ಮಾಹಿತಿ ನೀಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದವರು ಹೇಳಿದರು.
ದೇಶದಲ್ಲಿ ಭಯೋತ್ಪಾದನೆ ಇದ್ದರೆ ಬಿಜೆಪಿಯವರು ಅದನ್ನು ಹತ್ತಿಕ್ಕಲಿ. ಡಬಲ್ ಇಂಜಿನ್ ಸರಕಾರವಿರುವಾಗ ಇದು ಅಸಾಧ್ಯವೇನಲ್ಲ. ಅಕಾರವೂ ಅವರ ಕೈಯಲ್ಲೇ ಇದೆ. ದೇಶದಲ್ಲಿ ಎಲ್ಲೆಲ್ಲಿ ಉಗ್ರಗಾಮಿ ಚಟುವಟಿಕೆ ನಡೆಯುತ್ತಿದೆಯೋ ಅದನ್ನು ಹತ್ತಿಕ್ಕಲಿ ಎಂದು ಸಿದ್ದರಾಮಯ್ಯ ಹೇಳಿದರು.
ನೈತಿಕ ಪೊಲೀಸ್ ಗಿರಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಸಿಎಂ ಬೊಮ್ಮಾಯಿಯವರು ಇದಕ್ಕೆ ಪ್ರೋತ್ಸಾಹಿಸುವ ಹೇಳಿಕೆ ನೀಡುತ್ತಿದ್ದಾರೆ. ಇದುವರೆಗೆ ಇಂತಹ ಏಳೆಂಟು ಪ್ರಕಣಗಳಾಗಿದ್ದು, ಇದನ್ನು ನಾನು ಖಂಡಿಸುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯಾರು ತಪ್ಪು ಮಾಡಿದ್ದಾರೆಯೋ ಅವರ ಮೇಲೆ ಸರಕಾರ ಕ್ರಮ ತಗೆದುಕೊಳ್ಳಬೇಕು ಸಿದ್ದರಾಮಯ್ಯ ಒತ್ತಾಯಿಸಿದರು.