ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮೀಸಲಾತಿ ಬಗ್ಗೆ ಅಮೆರಿಕದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿಚಾರವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ನಾಯಕರು ಇಂದು ಶನಿವಾರ ದೂರು ನೀಡಿದ್ದಾರೆ.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜಕುಮಾರ್ ಪಾಟೀಲ್, ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತಕುಮಾರ್ ಸೇರಿ ಬಿಜೆಪಿ ನಾಯಕರು ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಇತ್ತೀಚೆಗೆ ಅಮೆರಿಕ ಪ್ರವಾಸ ಕೈಗೊಂಡ ಸಮಯದಲ್ಲಿ ರಾಹುಲ್ ಗಾಂಧಿ ಅವರು, ‘ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್ ಪಕ್ಷ ಚಿಂತಿಸಲಿದೆ’ ಎಂದು ಹೇಳಿದ್ದರು. ನಂತರದ ಮಾಧ್ಯಮ ಸಂವಾದದಲ್ಲಿ, ‘ನಾನು ಮೀಸಲಾತಿಗೆ ವಿರುದ್ಧವಾಗಿ ಇದ್ದೇನೆ ಎಂಬಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಮೀಸಲಾತಿ ಮಿತಿಯನ್ನು ನಾವು ಶೇ 50 ಮೀರಿ ವಿಸ್ತರಿಸಲಿದ್ದೇವೆ’ ಎಂದು ಸ್ಪಷ್ಟಪಡಿಸಿದ್ದರು.
ರಾಹುಲ್ ಗಾಂಧಿಯವರ ಈ ಹೇಳಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು.