ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಮತ್ತಷ್ಟು ಬೆಳವಣಿಗೆಗಳು ನಡೆಯುತ್ತಿದ್ದು, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಈಗ ವೆಂಕಪ್ಪ ಕೋಟ್ಯಾನ್ ಎಂಬುವರು ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ.
2012ರಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಗೀಡಾಗಿದ್ದ ಇಲ್ಲಿನ ಪಾಂಗಾಳ ನಿವಾಸಿ ಸೌಜನ್ಯಾಳನ್ನು ಆಕೆಯ ಮಾವ ವಿಠಲ ಗೌಡರೇ ಕೊಲೆ ಮಾಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಇತ್ತೀಚೆಗೆ ಆರೋಪ ಮಾಡಿದ್ದರು. ಸೌಜನ್ಯಳಿಗೆ ನ್ಯಾಯ ಒದಗಿಸಲು ನಡೆಯುತ್ತಿರುವ ಹೋರಾಟದ ದಾರಿ ತಪ್ಪಿಸುವ ದುರುದ್ದೇಶವನ್ನು ಅವರ ಈ ಹೇಳಿಕೆ ಹೊಂದಿದೆ ಎಂದು ದೂರಿನಲ್ಲಿ ವೆಂಕಪ್ಪ ಕೋಟ್ಯಾನ್ ಆರೋಪಿಸಿದ್ದಾರೆ.
ಸ್ನೇಹಮಯಿ ಕೃಷ್ಣ ಅವರನ್ನು ಮೈಸೂರಿನಿಂದ ಕರೆಯಿಸಿ ವಿಚಾರಣೆ ನಡೆಸಬೇಕು, ಅವರು ಈ ರೀತಿ ಹೇಳಿಕೆ ನೀಡಿರುವುದರ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ವಿಸ್ತೃತ ತನಿಖೆಯಾಗಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.