ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾದ ಮಧ್ಯಪ್ರದೇಶದ ಜವರಿ ದೇವಾಲಯದಲ್ಲಿನ ವಿಷ್ಣುವಿನ ವಿಗ್ರಹ ಮರುಸ್ಥಾಪಿಸುವ ಕುರಿತಾದ ಪ್ರಕರಣದ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರು ಹೇಳಿದ್ದ ಮಾತು ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ಈ ಹಿನ್ನೆಲೆಯಲ್ಲಿ ಇಂದು ಸ್ಪಷ್ಟನೆ ನೀಡಿರುವ ಸಿಜೆಐ ಗವಾಯಿ, ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಧ್ಯಪ್ರದೇಶದ ಯುನೆಸ್ಕೋ ವಿಶ್ವ ಪರಂಪರೆಯ ಖಜುರಾಹೊ ದೇವಾಲಯ ಸಂಕೀರ್ಣದ ಭಾಗವಾಗಿರುವ ಜವಾರಿ ದೇವಾಲಯದಲ್ಲಿರುವ 7 ಅಡಿ ಎತ್ತರದ ವಿಷ್ಣುವಿನ ವಿಗ್ರಹದ ಕುರಿತು ತಮ್ಮ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ತಪ್ಪಾಗಿ ನಿರೂಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸೆಪ್ಟೆಂಬರ್ 16ರಂದು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾದ ಮಧ್ಯಪ್ರದೇಶದ ಜವರಿ ದೇವಾಲಯದಲ್ಲಿ 7 ಅಡಿ ಎತ್ತರದ ವಿಷ್ಣುವಿನ ವಿಗ್ರಹವನ್ನು ಮರುಸ್ಥಾಪಿಸಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸಿಜೆಐ ಗವಾಯಿ ವಜಾಗೊಳಿಸಿದ್ದರು. ಈ ಅರ್ಜಿಯನ್ನು ತಿರಸ್ಕರಿಸಿದ ಅವರು ಇದನ್ನು ‘ಪ್ರಚಾರ ಹಿತಾಸಕ್ತಿಯ ಮೊಕದ್ದಮೆ’ ಎಂದು ಕರೆದಿದ್ದರು.
‘ಇದು ಸಂಪೂರ್ಣವಾಗಿ ಪ್ರಚಾರ ಹಿತಾಸಕ್ತಿ ಮೊಕದ್ದಮೆ. ಹೋಗಿ ದೇವರನ್ನೇ ಏನಾದರೂ ಮಾಡಲು ಕೇಳಿ. ನೀವು ವಿಷ್ಣುವಿನ ದೊಡ್ಡ ಭಕ್ತ ಎಂದು ಹೇಳುತ್ತಿದ್ದೀರಿ. ಹಾಗಿದ್ದರೆ ನೀವೇ ಪ್ರಾರ್ಥಿಸಿ ಮತ್ತು ಸ್ವಲ್ಪ ಧ್ಯಾನ ಮಾಡಿ’ ಎಂದು ಸಿಜೆಐ ಗವಾಯಿ ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಈ ಹಿನ್ನೆಲೆಯಲ್ಲಿ ಇಂದು ಸುಪ್ರೀಂ ಕೋರ್ಟ್ನಲ್ಲೇ ಸ್ಪಷ್ಟನೆ ನೀಡಿರುವ ಸಿಜೆಐ ಗವಾಯಿ, ನಾನು ಹೇಳಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ತಪ್ಪಾಗಿ ಚಿತ್ರಿಸಲಾಗಿದೆ ಎಂದು ಯಾರೋ ನನಗೆ ಹೇಳಿದರು. ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ. ನನ್ನ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ನಿರೂಪಿಸಲಾಗಿದೆ ಎಂದಿದ್ದಾರೆ.