ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬದಲಿಸಿ, ಹೊಸದಾಗಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿರುವುದನ್ನು ವಿರೋಧಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಕುರಿತು ಚರ್ಚಿಸಲು ಹಾಗೂ ವಿಧಾನಮಂಡಲದ ಜಂಟಿ ಅಧಿವೇಶನ ಕರೆಯಲು ದಿನಾಂಕ ನಿಗದಿಪಡಿಸಲು ಜನವರಿ 14ರ ಬುಧವಾರದಂದು ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.
ವರ್ಷದ ಮೊದಲ ಅಧಿವೇಶನವಾದ್ದರಿಂದ ರಾಜ್ಯಪಾಲರ ಭಾಷಣದೊಂದಿಗೆ ಜಂಟಿ ಅಧಿವೇಶನ ಆರಂಭವಾಗಲಿದೆ. ಈ ಅಧಿವೇಶನದಲ್ಲಿ ಕೇಂದ್ರದ ಹೊಸ ಕಾಯ್ದೆಯ ಸಾಧಕ-ಬಾಧಕಗಳ ಕುರಿತು ಗಂಭೀರ ಚರ್ಚೆ ನಡೆಯಲಿದೆ.
ಜನವರಿ 20 ಮತ್ತು 21ರಂದು ಎರಡು ದಿನಗಳ ಕಾಲ ವಿಶೇಷ ಅಧಿವೇಶನ ನಡೆಸುವ ಕುರಿತು ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
ಈಗಾಗಲೇ ಜನವರಿ 2ರ ಸಂಪುಟ ಸಭೆಯಲ್ಲಿ ಈ ಕಾಯ್ದೆಯ ವಿರುದ್ಧ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ವಿಧಾನಮಂಡಲದಲ್ಲಿ ಅಧಿಕೃತವಾಗಿ ನಿರ್ಣಯ ಅಂಗೀಕರಿಸಿ ಕೇಂದ್ರಕ್ಕೆ ಬಿಸಿ ಮುಟ್ಟಿಸಲು ಸರ್ಕಾರ ಮುಂದಾಗಿದೆ.
ಮನರೇಗಾ ರದ್ದತಿಯನ್ನು ವಿರೋಧಿಸಿ ಕಾಂಗ್ರೆಸ್ ಈಗಾಗಲೇ ಗ್ರಾಮ ಮಟ್ಟದಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದು, ರಾಜ್ಯ ಸರ್ಕಾರವು ಕಾಯ್ದೆಯಿಂದ ರಾಜ್ಯದ ಜನರಿಗಾಗುವ ತೊಂದರೆಗಳ ಬಗ್ಗೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ಕಾರ್ಯತಂತ್ರ ರೂಪಿಸುತ್ತಿದೆ.


